ಡಿ.6ರಂದು ಸುಜ್ಞಾನ ಪಿಯು ಕಾಲೇಜಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪರೀಕ್ಷೆ

0
15

ಕುಂದಾಪುರ : ಪ್ರಸ್ತುತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಡಿಸೆಂಬರ್ 6ರಂದು ಕುಂದಾಪುರದ ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿರುವ ಸುಜ್ಞಾನ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿವೇತನ ಪರೀಕ್ಷೆ ಆಯೋಜಿಸಲಾಗಿದೆ ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ತಿಳಿಸಿದರು.

ನವೆಂಬರ್ 22ರಂದು ವಿದ್ಯಾರಣ್ಯ ಕ್ಯಾಂಪಸ್‌ನ ಸುಜ್ಞಾನ ಪಿಯು ಕಾಲೇಜಿನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕನ್ನಡ ಮತ್ತು ಆಂಗ್ಲ ಮಾಧ್ಯಮ ಸೇರಿದಂತೆ ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಪಠ್ಯಕ್ರಮಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ತಿಳಿಸಿದರು.

ಕಳೆದ ಐದು ವರ್ಷಗಳಿಂದ ಕುಂದಾಪುರದಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ಗುರುತಿಸಿಕೊಂಡಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್, ಸಿಇಟಿ, ನೀಟ್, ಜೆಇಇ, ಸಿಎ ಮತ್ತು ಸಿಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುತ್ತಿದೆ.

ವಿದ್ಯಾರ್ಥಿಗಳಿಗೆ ಐಐಟಿ, ವೈದ್ಯಕೀಯ ಕಾಲೇಜುಗಳು ಹಾಗೂ ಕರ್ನಾಟಕದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅಗತ್ಯ ಮಾರ್ಗದರ್ಶನ ನೀಡಲಾಗುತ್ತಿದೆ. ಕಳೆದ ಸಾಲಿನಲ್ಲಿ ಸಂಸ್ಥೆಯ ಹಲವು ವಿದ್ಯಾರ್ಥಿಗಳು ಎಂಬಿಬಿಎಸ್ ಪ್ರವೇಶ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯೊಂದಿಗೆ ನೀಟ್ ಪರೀಕ್ಷೆಯಲ್ಲೂ ಸಮ್ಮೇದ್ ಪ್ಯಾರಿಸ್ ಅವರು ಅಖಿಲ ಭಾರತ ಮಟ್ಟದಲ್ಲಿ 2135ನೇ ರ‍್ಯಾಂಕ್ (ವರ್ಗವಾರು) ಪಡೆದು ಬ್ರಹ್ಮಾವರ, ಕುಂದಾಪುರ, ಬೈಂದೂರು ಹಾಗೂ ಹೆಬ್ರಿ ತಾಲೂಕುಗಳ ವ್ಯಾಪ್ತಿಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಸಂಸ್ಥೆಯ ಹೆಮ್ಮೆಯ ಸಾಧನೆಯಾಗಿದೆ. ಧನುಷ್ ದೇವಾಡಿಗ, ಜೈರಾಜ್, ರುಮೇಜ್ ಶೇಖ್, ಇಂಚರಾ, ಅಲಿಜಾ ಕರಾಮತುಲ್ಲಾ ಹಾಗೂ ಅರ್ಜುನ್ ಜಿ. ಶೆಟ್ಟಿ ಸೇರಿದಂತೆ ಹಲವು ವಿದ್ಯಾರ್ಥಿಗಳು ಸರ್ಕಾರಿ ಕೋಟಾದಡಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದಿದ್ದಾರೆ ಎಂದು ವಿವರಿಸಿದರು.

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಜೊತೆಗೆ ಪಿಯುಸಿ ಬೋರ್ಡ್ ಪರೀಕ್ಷೆಗಳಿಗೂ ಸಮಗ್ರ ಸಿದ್ಧತೆ ನೀಡಲಾಗುತ್ತಿದ್ದು, ರಾಜ್ಯದ ಹಾಗೂ ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಅನುಭವಿ ಬೋಧಕ ವೃಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ ಎಂದರು.

24×7 ವಸತಿ ಸಹಿತ ಶಿಕ್ಷಣ ವ್ಯವಸ್ಥೆ

ಸುಮಾರು 15 ಎಕರೆ ವಿಶಾಲವಾದ ಹಸಿರು ಪರಿಸರದಲ್ಲಿ ಹರಡಿಕೊಂಡಿರುವ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ 24×7 ವಸತಿ ಸಹಿತ ಶಿಕ್ಷಣ ವ್ಯವಸ್ಥೆಯನ್ನು ಸಂಸ್ಥೆ ಕಲ್ಪಿಸಿದೆ.