ಉಜಿರೆ : ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು, ಉಜಿರೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕ ಹಾಗೂ ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಂಯುಕ್ತ ಆಶ್ರಯದಲ್ಲಿ ‘ಸ್ವಚ್ಛ ಉಜಿರೆ – ಸ್ವಸ್ಥ ಉಜಿರೆ’ ಸ್ವಚ್ಛತಾ ಅಭಿಯಾನ ನಡೆಯಿತು.
ಅಭಿಯಾನವನ್ನು ಉದ್ಘಾಟಿಸಿದ ಉಜಿರೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಮಹಾವೀರ ಶೇಬಣ್ಣನವರು ಮಾತನಾಡಿ, ಪ್ರತಿಯೊಬ್ಬ ನಾಗರಿಕನೂ ಸ್ವಚ್ಛತೆಯ ಕುರಿತು ಅರಿವು ಹೊಂದಿರಬೇಕು. ಗ್ರಾಮ ಪಂಚಾಯತ್ ವತಿಯಿಂದಲೂ ಸ್ವಚ್ಛತೆ ಕುರಿತು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಎಸ್ಡಿಎಂ ಕಾಲೇಜು ಇಂತಹ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಸಾದ್ ಬಿ.ಎಸ್. ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳವು ಸ್ವಚ್ಛತೆಗೆ ಹೆಸರುವಾಸಿಯಾಗಿದೆ. ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸದಾ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡುತ್ತಾ ಬಂದಿದ್ದಾರೆ. ಅವರ ಜನ್ಮದಿನದ ಅಂಗವಾಗಿ ಎನ್ಎಸ್ಎಸ್ ಘಟಕ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನ ಅರ್ಥಪೂರ್ಣವಾಗಿದೆ. ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಭಾರತದ ಕನಸು ನನಸಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
‘ಸ್ವಚ್ಛ ಉಜಿರೆ – ಸ್ವಸ್ಥ ಉಜಿರೆ’ ಅಭಿಯಾನದ ಅಂಗವಾಗಿ ಎನ್ಎಸ್ಎಸ್ ಸ್ವಯಂಸೇವಕರು ಕಾಲೇಜಿನಿಂದ ಉಜಿರೆ ವೃತ್ತದವರೆಗೆ ಸ್ವಚ್ಛತಾ ಕಾರ್ಯ ನಡೆಸಿ ಪರಿಸರ ಶುಚಿತ್ವದ ಕುರಿತು ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಭೌತಶಾಸ್ತ್ರ ಉಪನ್ಯಾಸಕ ಲಕ್ಷ್ಮೀಶ್ ಭಟ್, ಎನ್ಎಸ್ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್. ಹಾಗೂ ಸಹ ಯೋಜನಾಧಿಕಾರಿ ಶೋಭಾ ಪಿ. ಉಪಸ್ಥಿತರಿದ್ದರು.
ಸ್ವಯಂಸೇವಕಿ ಹಂಸವಿ ಕಾರ್ಯಕ್ರಮ ನಿರೂಪಿಸಿದರು. ಕೀರ್ತನಾ ಸ್ವಾಗತಿಸಿ, ಜ್ಯೋತಿಕ ವಂದಿಸಿದರು.

