
ಪದ್ಮುಂಜ : ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಜನಾಂದೋಲನ ಬೃಹತ್ ಪ್ರತಿಭಟನೆ ನ. 23ರಂದು ನಡೆಯಿತು.
ಪದ್ಮುಂಜ ಮುಖ್ಯ ಪಟ್ಟಣದಲ್ಲಿ ಕಾಲ್ನಡಿಗೆ ಜಾಥಾದ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಬಳಿಕ ನಡೆದ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ರಾಜ್ಯ ಸರ್ಕಾರದ ಆಡಳಿತ ನೀತಿಗಳನ್ನು ಟೀಕಿಸಿ, ಸರ್ಕಾರದ ವೈಫಲ್ಯಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಜೋಯಲ್ ಮಂಡೋನ್ಸ ಮಡಂತ್ಯಾರು, ಜಿಲ್ಲಾ ಮನ್ ಕೀ ಬಾತ್ ಸಂಚಾಲಕ ಸೀತಾರಾಮ್ ಬೆಳಾಲು ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಹಾಬಲ ಗೌಡ ಪೆರ್ಲ-ಬೈಪಾಡಿ ಅವರು ಮಾತನಾಡಿ, ರಾಜ್ಯ ಸರ್ಕಾರದ ನೀತಿಗಳು ಹಾಗೂ ಆಡಳಿತಾತ್ಮಕ ವಿಚಾರಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಸಹಪ್ರಭಾರಿ ಜಯಂತ್ ಕೋಟ್ಯಾನ್, ಕಣಿಯೂರು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇಂಕ್ಯಾರ್, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಸುನಿಲ್ ಅನವು, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅಮಿತಾ ಕುಶಾಲಪ್ಪ ಗೌಡ, ಉರುವಾಲು ಶಕ್ತಿ ಕೇಂದ್ರ ಪ್ರಮುಖ ಕೃಷ್ಣಪ್ರಸಾದ್ ಮಜಿಕುಡೇಲ್ ಸೇರಿದಂತೆ ಪಕ್ಷದ ವಿವಿಧ ಜವಾಬ್ದಾರಿಯ ಪ್ರಮುಖರು, ಕಾರ್ಯಕರ್ತರು ಹಾಗೂ ನಾಗರಿಕರು ಉಪಸ್ಥಿತರಿದ್ದರು.
ಕಣಿಯೂರು ಶಕ್ತಿ ಕೇಂದ್ರದ ಪ್ರಮುಖ ಹಾಗೂ ಯುವ ವಕೀಲ ಯತೀಶ್ ಶೆಟ್ಟಿ ಪಣೆಕ್ಕರ ಕಾರ್ಯಕ್ರಮ ನಿರ್ವಹಿಸಿದರು. ಪ್ರತಿಭಟನೆಯ ಬಳಿಕ ಕಣಿಯೂರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿದ ಪ್ರತಿಭಟನಾಕಾರರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿದರು.
