ನೆಲ್ಯಾಡಿ : ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಈಚರ್ ಲಾರಿ ಹಾಗೂ ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಈಚರ್ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ.
ಗಾಯಗೊಂಡ ಚಾಲಕನನ್ನು ಕಲ್ಲೇರಿ ಸಮೀಪದ ಬಾರ್ಯ ನಿವಾಸಿ ಚಂದ್ರ (51) ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಅಡಿಕೆ ಸಾಗಿಸುತ್ತಿದ್ದ ಈಚರ್ ಲಾರಿಗೆ, ಕೆ.ಆರ್. ನಗರದಿಂದ ಮಂಗಳೂರಿಗೆ ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವು ಗುಂಡ್ಯದಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಪಿಕಪ್ ವಾಹನ ರಸ್ತೆಯಲ್ಲೇ ಪಲ್ಟಿಯಾಗಿದ್ದು, ಅದರಲ್ಲಿದ್ದ ಕಲ್ಲಂಗಡಿ ಹಣ್ಣುಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಅಪಘಾತದ ಪರಿಣಾಮ ಈಚರ್ ಲಾರಿ ಚಾಲಕ ಚಂದ್ರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಪಿಕಪ್ ವಾಹನದ ಚಾಲಕ ಅಪಘಾತದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

