ಪತ್ನಿಯ ಕೊಲೆ ಪ್ರಕರಣ : ಪತಿಗೆ 5 ವರ್ಷ ಜೈಲು

0
12

ಬಂಟ್ವಾಳ : ಪತ್ನಿಯನ್ನು ಕೊಲೆಗೈದು, ಸಾವನ್ನು ಹೃದಯಾಘಾತದಿಂದ ಸಂಭವಿಸಿದ ಅಸ್ವಾಭಾವಿಕ ಮರಣವೆಂದು ಬಿಂಬಿಸಲು ಯತ್ನಿಸಿದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ಗ್ರಾಮದ ನಿವಾಸಿ ಸಂಜೀವ ನಾಯ್ಕ ಶಿಕ್ಷೆಗೆ ಒಳಗಾದ ಆರೋಪಿ.

2024ರ ಡಿಸೆಂಬರ್ 11ರಂದು ರಾತ್ರಿ ಪುಣಚದಲ್ಲಿ ಘಟನೆ ನಡೆದಿತ್ತು. ಪತ್ನಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ ಎಂದು ಸಂಜೀವ ನಾಯ್ಕ ನೆರೆಮನೆಯವರಿಗೆ ತಿಳಿಸಿದ್ದ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯಕೀಯ ಪರೀಕ್ಷೆಯ ವೇಳೆ ಅವರು ಮೃತಪಟ್ಟಿರುವುದು ದೃಢಪಟ್ಟಿತ್ತು.

ಮೃತದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸ್ ನಿರೀಕ್ಷಕ ನಾಗರಾಜ್ ಎಚ್.ಇ. ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿ.ಎನ್.ಎಸ್. ಸೆಕ್ಷನ್ 105ರ ಅಡಿಯಲ್ಲಿ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ.

ಅಲ್ಲದೆ, ಬಿ.ಎನ್.ಎಸ್. ಸೆಕ್ಷನ್ 240ರ ಅಡಿಯಲ್ಲಿ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ.

ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಜ್ಯೋತಿ ನಾಯ್ಕ ಅವರು ವಾದ ಮಂಡಿಸಿದ್ದರು.