ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದ ಮೇಲೆ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಚೆನ್ನಯ್ಯ ಪೂಜಾರಿ ಕಂಠಪೂರ್ತಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ತೊಂದರೆ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ನಡೆದ ಗಲಾಟೆಯ ಸಂದರ್ಭದಲ್ಲಿ ರಿಶಿಕಾ ಕತ್ತಿ ಬೀಸಿದ್ದು, ಅದು ಚೆನ್ನಯ್ಯ ಪೂಜಾರಿ ಅವರ ಎದೆಗೆ ತಾಗಿ ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ರಿಶಿಕಾಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

