ನವದೆಹಲಿ: ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈ ಪೈಕಿ 241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂಬುದು ತಿಳಿದು ಬಂದಿದೆ. ಗುರುವಾರ ಮಧ್ಯಾಹ್ನ ಅಹಮದಾಬಾದ್ನಿಂದ ಲಂಡನ್ನ ಗ್ಯಾಟ್ವಿಕ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಾನಿ ನಗರದಲ್ಲಿ ವೈದ್ಯಕೀಯ ಕಾಲೇಜು ಹಾಸ್ಟೆಲ್ ಮೇಲೆ ಪತನವಾಗಿ ಘನಘೋರ ದುರಂತ ಸಂಭವಿಸಿತ್ತು. ವಿಮಾನದಲ್ಲಿದ್ದ ಏಕೈಕ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ವಿಶ್ವಾಸ್ ಕುಮಾರ್ ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದರು. ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಸೇರಿದ್ದಾರೆ.
ಏತನ್ಮಧ್ಯೆ, ವಿಮಾನ ಪತನದ ಕಾರಣಗಳನ್ನು ಪತ್ತೆಹಚ್ಚಲು ತನಿಖೆ ತ್ವರಿತಗತಿಯಲ್ಲಿ ಸಾಗುತ್ತಿದೆ. ತನಿಖೆಯಲ್ಲಿ ಮಹತ್ವದ ಪಾತ್ರವಹಿಸಲಿರುವ ನಿರ್ಣಾಯಕ ಸಾಧನವಾಗಿದ್ದ ಒಂದು ಬ್ಲ್ಯಾಕ್ ಬಾಕ್ಸ್ ಅನ್ನು ಗುರುವಾರ ರಾತ್ರಿ ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಎರಡನೇ ಬ್ಲ್ಯಾಕ್ ಬಾಕ್ಸ್ ಮತ್ತು ಡಿಜಿಟಲ್ ವಿಡಿಯೋ ರೆಕಾರ್ಡರ್ಗಾಗಿ (ಡಿವಿಆರ್) ಶೋಧ ಕಾರ್ಯ ಮುಂದುವರೆದಿದ್ದು, ಇವುಗಳು ಪ್ರಮುಖ ಸುಳಿವುಗಳನ್ನು ನೀಡಲಿವೆ.
ವಿಮಾನ ಅಪಘಾತಕ್ಕೆ ಕಾರಣವೇನು ಎಂಬುದನ್ನು ಪತ್ತೆಹಚ್ಚುವುದಕ್ಕಾಗಿ ನಾಗರಿಕ ವಿಮಾನಯಾನ ಸಚಿವಾಲಯವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಏರ್ ಇಂಡಿಯಾ ವಿಮಾನ AI-171 ಅಪಘಾತದ ಕಾರಣಗಳನ್ನು ಪತ್ತೆ ಮಾಡುವುದಷ್ಟೇ ಅಲ್ಲದೆ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ಎದುರಿಸಲು ಅಸ್ತಿತ್ವದಲ್ಲಿರುವ ಎಸ್ಒಪಿಗಳಲ್ಲಿ ಮಾಡಬೇಕಾದ ಬದಲಾವಣೆಗಳು ಮತ್ತು ಸಮಗ್ರ ಮಾರ್ಗಸೂಚಿಗಳನ್ನು ಸೂಚಿಸಲಿದೆ.
ಕೇಂದ್ರ ಗೃಹ ಕಾರ್ಯದರ್ಶಿ, ಗೃಹ ಸಚಿವಾಲಯ ಮತ್ತು ಭಾರತ ಸರ್ಕಾರದ ನೇತೃತ್ವದಲ್ಲಿ ಈ ಸಮಿತಿ ಕಾರ್ಯಾಚರಿಸಲಿದೆ. ಇದರಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ, ಗುಜರಾತ್ ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಗುಜರಾತ್ ಸರ್ಕಾರದ ಪ್ರತಿನಿಧಿ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಗುಜರಾತ್ ಸರ್ಕಾರದ ಪ್ರತಿನಿಧಿ, ಅಹಮದಾಬಾದ್ ಪೊಲೀಸ್ ಆಯುಕ್ತರು, ಭಾರತೀಯ ವಾಯುಪಡೆಯ ಮಹಾನಿರ್ದೇಶಕರು, ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ/ಡಿಜಿ ಬಿಸಿಎಎಸ್, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ/ಡಿಜಿ ಡಿಜಿಸಿಎ, ಐಬಿಯ ವಿಶೇಷ ನಿರ್ದೇಶಕರು, ಭಾರತ ಸರ್ಕಾರದ ವಿಧಿವಿಜ್ಞಾನ ಸೇವೆಗಳ ನಿರ್ದೇಶನಾಲಯದ ನಿರ್ದೇಶಕರು ಇರಲಿದ್ದಾರೆ.
ಸ್ಥಳ ಪರಿಶೀಲನೆ, ಎಟಿಸಿ ಮತ್ತು ಸಂಬಂಧಿತ ಸಿಬ್ಬಂದಿಯ ವಿಚಾರಣೆಯನ್ನೂ ಸಮಿತಿ ನಡೆಸಲಿದೆ. ಸಮಗ್ರ ತನಿಖೆ ನಡೆಸಿ ಮೂರು ತಿಂಗಳೊಳಗೆ ವರದಿಯನ್ನು ಸಲ್ಲಿಸಲಿದೆ.