ಮಂಗಳೂರು : ಜುಲೈ 24ರಂದು ಶಾಲೆ, ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ದಕ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ತಹಸೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಉಳಿದ ತಾಲೂಕುಗಳಿಗೂ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ.
ಹಾಗೇ ನದಿ, ಸಮುದ್ರ ತೀರ ಪ್ರದೇಶಕ್ಕೆ ತೆರಳದಂತೆ ಸೂಚಿಸಿದ್ದಾರೆ. ಅಲ್ಲದೇ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಿದ್ದಾರೆ.
ಉಡುಪಿ ಜಿಲ್ಲೆ ಗೂ ರಜೆ ಘೋಷಣೆ
ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿಪೂರ್ವ, ಐಟಿಐ ಕಾಲೇಜುಗಳಿಗೆ ಗುರುವಾರ(24.07.2025)ದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪಾ.ಟಿ.ಕೆ ಆದೇಶಿಸಿದ್ದಾರೆ. ಇನ್ನು ಪದವಿ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಮುಂದಿನ 1 ವಾರ ಹಲವೆಡೆ ಮಳೆ
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗಲಿದ್ದು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್ & ಆರೆಂಜ್ ಅಲರ್ಟ್ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಜುಲೈ 23 ರಿಂದ 29 ರವರೆಗೆ ವ್ಯಾಪಕ ಮಳೆಯಾಗಲಿದೆ. ಜುಲೈ 23-27 ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 23 ರಂದು ವ್ಯಾಪಕ ಮಳೆಯಾಗಲಿದೆ. ಇನ್ನು 24 ರಿಂದ 26 ರವರಿಗೆ ಹಲವು ಕಡೆ ಮಳೆಯಾಗುವ ಸಾಧ್ಯತೆಗಳಿವೆ. ಜುಲೈ 23 ರಿಂದ 27 ರವರೆಗೆ ಬೆಂಗಳೂರು ಸೇರಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಗುರ ಸಾಧಾರಣ ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

