ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಜುಲೈ 30, 2025ರಂದು ಕರ್ನಾಟಕದಾದ್ಯಂತ ಮಳೆಯ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯ ಸಾಧ್ಯತೆ ಇದ್ದು, ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಕೆಲ ಜಿಲ್ಲೆಗಳಿಗಂತೂ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯೊಂದಿಗೆ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ 30-50 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗಲಿದ್ದು, ಜನರು ಮುಂಜಾಗ್ರತೆ ವಹಿಸುವಂತೆ KSNDMC ಸೂಚಿಸಿದೆ. ಉಡುಪಿ ಮತ್ತು ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಅತಿ ಭಾರಿ ಮಳೆಯ ಸಾಧ್ಯತೆಯನ್ನೂ ಒಳಗೊಂಡಂತೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಕೆಲವು ಕಡೆ ಜಲಾವೃತ ಸ್ಥಿತಿ ಉಂಟಾಗಿದೆ. ಶಿವಮೊಗ್ಗದ ಹೊಸನಗರದ ಸುಳುಗೋಡಿನಲ್ಲಿ ಜುಲೈ 28ರಿಂದ 29ರವರೆಗೆ 50 ಮಿಮೀ ಅತ್ಯಧಿಕ ಮಳೆ ದಾಖಲಾಗಿದೆ. ಈ ಪರಿಸ್ಥಿತಿಯಿಂದ ಭೂಕುಸಿತದ ಆತಂಕವೂ ಎದುರಾಗಿದ್ದು, ಚಾರ್ಮಾಡಿ ಮತ್ತು ಆಗುಂಬೆ ಘಾಟಿಗಳಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.