ಉಡುಪಿ: ದೇಶದ ಬೆನ್ನುಲುಬಾದ ರೈತಾಪಿ ವರ್ಗದ ಅಭಿವೃದ್ದಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಇಂದಿನ ಯುವಜನರು ಕೇವಲ ಸರಕಾರಿ ಹುದ್ದೆಗಳಿಗೆ ಅವಲಂಬಿತರಾಗದೇ ಕೃಷಿ ಕ್ಷೇತ್ರದಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಅಭಿಪ್ರಾಯಪಟ್ಟರು.
ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರೈತರು ಕೇವಲ ಕೃಷಿಯಲ್ಲಿ ಉಳಿಯದೇ ಉದ್ದಿಮೆ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಜಾರಿಗೆ ತಂದಿರುವ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಪ್ರಯೋಜನ ಜಿಲ್ಲೆಯ ಎಲ್ಲಾ ರೈತರು ಪಡೆಯುವಂತಾಗಬೇಕು ಎಂದರು
ಸರ್ಕಾರದ ಯೋಜನೆಗಳ ಮಾಹಿತಿಗಳನ್ನು ರೈತರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಇಲಾಖಾಧಿಕಾರಿಗಳು ಮುತುವರ್ಜಿವಹಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಬಗ್ಗೆ ಜನರಲ್ಲಿ ಮಾಹಿತಿಯ ಕೊರತೆ ಇದ್ದಾಗ ಇಲಾಖಾಧಿಕಾರಿಗಳು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಜನರಿಗೆ ಸರಿಯಾದ ಮಾಹಿತಿ ತಲುಪುತ್ತದೆ. ಇಲಾಖಾಧಿಕಾರಿಗಳು ಬ್ಯಾಂಕ್ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಕೃಷಿ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ , ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಕೇಂದ್ರ ಸರ್ಕಾರದ 6 ಲಕ್ಷ ಮತ್ತು ರಾಜ್ಯ ಸರ್ಕಾರದ 9 ಲಕ್ಷ ಸಹಾಯಧನದೊಂದಿಗೆ ಯೋಜನೆಯ ಅಡಿಯಲ್ಲಿ ಶೇ. 50 ರಷ್ಟು ಅಥವಾ ಗರಿಷ್ಟ 15 ಲಕ್ಷ ರೂ. ಸಹಾಯಧನ ನೀಡಲಾಗುವುದು. ಈವರೆಗೂ ಯೋಜನೆಯಡಿಯಲ್ಲಿ ರಾಜ್ಯದಲ್ಲಿ 6,500ಕ್ಕೂ ಹೆಚ್ಚು ಉದ್ದಿಮೆದಾರರಿಗೆ ಸಾಲ ಮಂಜೂರಾಗಿದ್ದು 2025-26 ಸಾಲಿನ ಆಯವ್ಯಯದಲ್ಲಿ 5000 ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳಿಗೆ 206.00 ಕೋಟಿ ಅನುದಾನ ಘೋಷಣೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 374 ವಿವಿಧ ಉದ್ದಿಮೆದಾರರಿಗೆ ಆರ್ಥಿಕ ನೆರವು ನೀಡಲಾಗಿದ್ದು, ಪ್ರಸ್ತುತ 43 ಫಲಾನುಭವಿಗಳು ಯೋಜನೆಯಡಿ ನೋಂದಾಯಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಸೂರಜ್ ಶೆಟ್ಟಿ, ವೆಂಕಟೇಶ್ ನಾಯ್ಕ್, ರಾಜೇಶ್ ಡಿ.ಪಿ, ರೂಪಾಶ್ರೀ ಹಾಗೂ ಡಾ. ಫಜಲ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಜು, ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಕುಮಾರಸ್ವಾಮಿ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಲೀಡ್ ಬ್ಯಾಂಕ್‌ನ ಸುಮನ್, ಕೆಪೆಕ್ ನ ಅರವಿಂದ್ ಮತ್ತಿತರರು ಉಪಸ್ಥಿತರಿದ್ದರು. ಕೃಷಿ ಇಲಾಖೆಯ ಅಧಿಕಾರಿ ಶ್ರೀರಾಮ್ ಹೆಗಡೆ ವಂದಿಸಿದರು.