ಉಡುಪಿ: ಚಂದ್ರನು ಭೂಮಿಯ ಸುತ್ತಲೂ ತನ್ನ ಕಕ್ಷೆಯಲ್ಲಿ ಹೋಗುತ್ತಾ ಸೂರ್ಯನಿಂದ ಭೂಮಿಯ ಹಿಂಬದಿ ಬಂದಾಗ ಚಂದ್ರಗ್ರಹಣವಾಗಲಿದೆ. ಚಂದ್ರನು ಪೂರ್ತಿಯಾಗಿ ಭೂಮಿಯ ನೆರಳಿನಲ್ಲಿ ಬರುವ ಕಾರಣ ಸೆ.7ರಂದು ಹುಣ್ಣಿಮೆ ರಾತ್ರಿ ಖಗ್ರಾಸ ಚಂದ್ರಗ್ರಹಣ ನಡೆಯಲಿದ್ದು, ಭಾರತದ ಎಲ್ಲಾ ಭಾಗಗಳಿಂದ ಎಲ್ಲರೂ ಕೂಡ ಈ ಖಗೋಳ ವಿದ್ಯಮಾನವನ್ನು ಬರಿಗಣ್ಣಿನಿಂದಲೇ ಯಾವುದೇ ಹಾನಿಯಿಲ್ಲದೆ ವೀಕ್ಷಿಸಬಹುದು ಎಂದು ಭೌತಶಾಸ್ತ್ರ ಪ್ರಾಧ್ಯಾಪಕ ಅತುಲ್ ಭಟ್ ತಿಳಿಸಿದ್ದಾರೆ.
ಸೆ. 7ರಂದು, ರಾತ್ರಿ 8:50ಕ್ಕೆ ಗ್ರಹಣವು ಪ್ರಾರಂಭವಾಗುವಾಗ ಭೂಮಿಯ ಅರೆನೆರಳು ಚಂದ್ರನ ಮೇಲೆ ಬೀಳಲು ಪ್ರಾರಂಭವಾಗುತ್ತದೆ. ಸುಮಾರು 9:57ರಿಂದ ಭೂಮಿಯ ನೆರಳು ಚಂದ್ರನ ಮೇಲೆ ಹರಿದಾಡುತ್ತದೆ. ಗ್ರಹಣ ಮುಂದುವರಿಯುತ್ತಾ 11.00ಕ್ಕೆ ಚಂದ್ರನು ಸಂಪೂರ್ಣವಾಗಿ ಭೂಮಿಯ ನೆರಳಿನಲ್ಲಿ ಬಂದಿರುತ್ತಾನೆ. ಈ ಕ್ಷಣದಿಂದ ಮಧ್ಯರಾತ್ರಿ 12:22ರ ವರೆಗೆ (ಸುಮಾರು 1 ಗಂಟೆ 22 ನಿಮಿಷ) ಖಗ್ರಾಸ ಚಂದ್ರಗ್ರಹಣ ವೀಕ್ಷಿಸಬಹುದು. 11:41ಕ್ಕೆ ಗರಿಷ್ಠ ಗ್ರಹಣದ ಕಾಲದಲ್ಲಿ ಕೆಂಪು ಚಂದ್ರನನ್ನು ವೀಕ್ಷಿಸಬಹುದು. 1:26ಕ್ಕೆ ಚಂದ್ರನು ಭೂಮಿಯ ನೆರಳಿನಿಂದ, ತದನಂತರ 2:25ಕ್ಕೆ ಭೂಮಿಯ ಅರೆನೆರಳಿನಿಂದ ಹೊರಬರುತ್ತಾನೆ. ಈ ಗ್ರಹಣದ ವಿವಿಧ ಹಂತಗಳನ್ನು ಸುಮಾರು 5 ಗಂಟೆ 27 ನಿಮಿಷ ಕಾಲ ವೀಸಬಹುದು ಎಂದು ಮಾಹಿತಿ ನೀಡಿದ್ದಾರೆ.
ತಾಮ್ರ ಕೆಂಪು ಬಣ್ಣದ ಚಂದ್ರ
ಖಗ್ರಾಸ ಚಂದ್ರ ಗ್ರಹಣದ ವೇಳೆ ಚಂದ್ರನು ತಾಮ್ರದಂತೆ ಕೆಂಪು ಬಣ್ಣ ಹೊಂದಿರುತ್ತಾನೆ. ಭೂಮಿಯು, ಚಂದ್ರನ ಮೇಲೆ ನೇರವಾಗಿ ಬೀಳುವ ಸೂರ್ಯ ಕಿರಣಗಳನ್ನು ತಡೆಗಟ್ಟುತ್ತದೆ. ಈ ಕಾರಣ, ಭೂಮಿಯ ವಾತಾವರಣದಲ್ಲಿ ಚದುರಿಸುವ ಕೆಂಪು ಬಣ್ಣವು, ಚಂದ್ರನ ಮೈಮೇಲಿಂದ ಪ್ರತಿಬಿಂಬಿಸುತ್ತದೆ. ಈ ಬೆಳಕಿನಿಂದಾಗಿ ಚಂದ್ರನು ಕೆಂಬಣ್ಣದಲ್ಲಿ ಗೋಚರಿಸುತ್ತಾನೆ. ಖಗೋಳಶಾಸ್ತ್ರಜ್ಞರು ಆಕಾಶಕಾಯಗಳ ಬೆಳಕನ್ನು ಪರಿಮಾಣ ಮಾಪನದಿಂದ ಗುರುತಿಸುತ್ತಾರೆ. ಸಾಮಾನ್ಯವಾಗಿ ಹುಣ್ಣಿಮೆಯ ಚಂದ್ರನ ಪರಿಮಾಣ ಸುಮಾರು ಮೈನಸ್ 13ರಷ್ಟು ಇರುತ್ತದೆ. ಆದರೆ, ಈ ಗ್ರಹಣದ ಸಮಯ ಮೈನಸ್ 1.35ರಷ್ಟಾಗಲಿದೆ. ಅಂದರೆ ಚಂದ್ರನು ಶೇ. 99.9ರಷ್ಟು ಮಂದವಾಗಿ ಕಾಣಿಸುತ್ತಾನೆ.

