ಮಂಗಳೂರು: ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ 2025 -26 ನೇ ಸಾಲಿನ ಶೈಕ್ಷಣಿಕ ವರ್ಷದ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಬಿ.ಟೆಕ್ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಓರಿಯೆಂಟೇಷನ್ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಶ್ರೀನಿವಾಸ್ ವಿಶ್ವವಿದ್ಯಾಲಯದ ಗೌರವಾನ್ವಿತ ಸಹಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ್ ರಾವ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು ಹಾಗೂ ದೀಪವನ್ನು ಬೆಳಗಿಸುವ ಮೂಲಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳು ಮತ್ತು ಅವರ ಹೆತ್ತವರು ಸಹ ವೇದಿಕೆಯ ಮೇಲೆ ಆಗಮಿಸಿ ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟನಾ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿದರು.
ಶ್ರೀನಿವಾಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಕೆ. ಸತ್ಯನಾರಾಯಣ ರೆಡ್ಡಿ, ಕುಲಸಚಿವರಾದ ಡಾ. ಅನಿಲ್ ಕುಮಾರ್, ಮೌಲ್ಯಮಾಪನ ವಿಭಾಗದ ಕುಲಸಚಿವರಾದ ಡಾ. ಶ್ರೀನಿವಾಸ ಮಯ್ಯ ಡಿ., ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಎನ್ ಹೆಗಡೆ, ಹಾಗೂ ಕಾರ್ಯಕ್ರಮದ ಸಂಯೋಜಕರಾದ ಡಾ. ಆಶಾ ಸರಸ್ವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಮುಖ್ಯಸ್ಥರಾದ ಡಾ. ರಾಮಕೃಷ್ಣ ಎನ್ ಹೆಗಡೆ ಯವರು ಸ್ವಾಗತ ಭಾಷಣವನ್ನು ಮಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಕಳೆದ 37 ವರ್ಷಗಳಲ್ಲಿ ಶ್ರೀನಿವಾಸ ಸಮೂಹ ಶೈಕ್ಷಣಿಕ ಸಂಸ್ಥೆಗಳು ಬೆಳೆದು ಬಂದ ಹಾದಿಯನ್ನು ಹಾಗೂ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಲಭ್ಯವಿರುವ ಇನ್ಕ್ಯುಬೇಷನ್ ಸೆಂಟರ್, ಸ್ಟಾರ್ಟ್ ಅಪ್ ಅವಕಾಶಗಳು ಹಾಗೂ ತರಬೇತಿ ಮತ್ತು ನಿಯೋಜನೆ ಕುರಿತು ಮಾಹಿತಿಯನ್ನು ನೀಡಿದರು.
ಅಧ್ಯಕ್ಷೀಯ ಭಾಷಣವನ್ನು ಮಾಡಿದ ಶ್ರೀನಿವಾಸ್ ವಿಶ್ವವಿದ್ಯಾಲಯದ ಗೌರವಾನ್ವಿತ ಸಹಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ್ ರಾವ್ ರವರು ಮಾತನಾಡಿ, ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಉದ್ಯಮದ ಬೇಡಿಕೆಯ ಅವಶ್ಯಕತೆಗಳಿಗೆ ಹಾಗೂ ತಂತ್ರಜ್ಞಾನಗಳಿಗೆ ಅನುಗುಣವಾಗಿ ಹೊಸ ತಂತ್ರಜ್ಞಾನಗಳನ್ನೊಳಗೊಂಡ ಮೌಲ್ಯವರ್ಧಿತ ಪಠ್ಯಕ್ರಮವನ್ನು ಅಳವಡಿಸಲಾಗಿದೆ. ವೇಗವಾಗಿ ಬದಲಾಗುತ್ತಿರುವ ಇಂದಿನ ತಾಂತ್ರಿಕ ಜಗತ್ತಿನಲ್ಲಿ ಹೊಸ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ವೇಗವಾದ ಉತ್ಪಾದನೆ ಬಹಳ ಮುಖ್ಯವಾಗಿದೆ. ಆದ್ದರಿಂದ ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಕಾಲೇಜಿನಲ್ಲಿ ಆಯೋಜಿಸುವ ಎಲ್ಲಾ ಚಟುವಟಿಕೆಗಳಲ್ಲಿ ಆಸಕ್ತಿಯಿಂದ ಭಾಗವಹಿಸಿ, ಶೈಕ್ಷಣಿಕ ಮತ್ತು ಉತ್ತಮ ನಾಯಕತ್ವ ಗುಣಗಳನ್ನು ಕಲಿತು, ಸಮಾಜಕ್ಕೆ ಹಾಗೂ ದೇಶಕ್ಕೆ ಉತ್ತಮ ಕೊಡುಗೆಯನ್ನು ನೀಡಬೇಕು ಎಂದು ಹೇಳಿ ನೂತನವಾಗಿ ಸೇರ್ಪಡೆಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.
ಶ್ರೀನಿವಾಸ್ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವರಾದ ಡಾ. ಶ್ರೀನಿವಾಸ ಮಯ್ಯ ಡಿ. ಯವರು ಶೈಕ್ಷಣಿಕ, ಪರೀಕ್ಷಾ ವಿಧಾನ ಮತ್ತು ಮೌಲ್ಯಮಾಪನ ಪ್ರಕ್ರಿಯೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಶ್ರೀನಿವಾಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಕೆ. ಸತ್ಯನಾರಾಯಣ ರೆಡ್ಡಿಯವರು ಮಾತನಾಡಿ, ಇಂದಿನ ಜಗತ್ತಿನಲ್ಲಿ ನಾವೀನ್ಯತೆಯು ಅತಿ ಮುಖ್ಯವಾಗಿದೆ ಎಂದು ಹೇಳಿದರು. ಎಲೋನ್ ಮಸ್ಕ್ ಅವರ ಉದಾಹರಣೆಯನ್ನು ಉಲ್ಲೇಖಿಸಿದ ಅವರು, ಇಂದಿನ ಯುಗದಲ್ಲಿ ತಂತ್ರಜ್ಞಾನದ ಮೂಲಕ ಹಲವಾರು ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ವೇಗವಾಗಿ ವಿಕಸನಗೊಳ್ಳುತ್ತಿರುವ ಜಗತ್ತಿನಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಹಯೋಗದ ಮೂಲಕ ಕಾರ್ಯ ನಿರ್ವಹಿಸಿದರೆ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದ ಸಂಯೋಜಕರಾದ ಡಾ. ಆಶಾ ಸರಸ್ವತಿ ಯವರು ಧನ್ಯವಾದ ಸಮರ್ಪಣೆ ಮಾಡಿದರು. ವಿದ್ಯಾರ್ಥಿನಿ ಕುಮಾರಿ ಆಶಾ ನಾಯಕ್ ಮತ್ತು ಕುಮಾರಿ ವೈಷ್ಣವಿ ಪ್ರಾರ್ಥನೆಯನ್ನು ಸಲ್ಲಿಸಿದರು. ವಿದ್ಯಾರ್ಥಿನಿ ಕುಮಾರಿ ನೇಹಾ ಕರುಣಾಕರ್, ಕುಮಾರಿ ಪ್ರಜ್ಞಾ ಆಚಾರ್ ಮತ್ತು ಪ್ರೊ. ರೋಹನ್ ಫೆರ್ನಾಂಡಿಸ್ ಕಾರ್ಯಕ್ರಮವನ್ನು ನಿರೂಪಿಸಿದರು.
ಈ ಸಂದರ್ಭದಲ್ಲಿ, ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರೊ. ವಿಶ್ವಾಸ್ ಶೆಟ್ಟಿ ಮತ್ತು ವಿದ್ಯಾರ್ಥಿಗಳಾದ ಶ್ರೀ ವಿಶಾಖ್ ಮೆಂಡನ್ ಹಾಗೂ ಶ್ರೀ ಅರವಿಂದ್ ವಿಲ್ಸನ್ ರವರು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದ ದೇಶದ ಮೊದಲ ಎಂಟು ಮೋಟಾರುಗಳ ಸಂರಚನೆಯ ಮನುಷ್ಯರನ್ನು ಹೊತ್ತೊಯ್ಯುವ ಡ್ರೋನ್ ಸಾಧನದ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಹೆತ್ತವರಿಗೆ ಮಾಹಿತಿ ನೀಡಲಾಯಿತು.
ಶ್ರೀನಿವಾಸ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವರಾದ ಡಾ. ಜಯಶ್ರೀ ಬೋಳಾರ್, ಶ್ರೀನಿವಾಸ್ ವಿಶ್ವವಿದ್ಯಾಲಯದ ಆರೋಗ್ಯ ವಿಜ್ಞಾನ ಸಂಶೋಧನಾ ವಿಭಾಗದ ನಿರ್ದೇಶಕರಾದ ಡಾ. ಶ್ರೀಮತಿ ಸುಚೇತಾ ಕುಮಾರಿ, ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಮುಖ್ಯಸ್ಥರಾದ ಡಾ. ಜೂಬಿ ಮೇರಿ ಚಾಕೋ, ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮುಖ್ಯಸ್ಥರಾದ ಡಾ. ಉದಯಕುಮಾರ್ ರಾವ್, ಶ್ರೀನಿವಾಸ್ ವಿಶ್ವವಿದ್ಯಾಲಯದ ಇನ್ಕ್ಯುಬೇಷನ್ ವಿಭಾಗದ ನಿರ್ದೇಶಕರಾದ ಡಾ. ನವೀನ್ ಬಪ್ಪಳಿಗೆ, ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಹೆತ್ತವರು, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.