ಸುಳ್ಯ : ಸುಳ್ಯ ತಾಲೂಕಿನಲ್ಲಿನ ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಯ ಗಂಭೀರ ಸಮಸ್ಯೆಯನ್ನು ಖಂಡಿಸಿ ಎಬಿವಿಪಿ ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು. ಸಮಯ ಪಾಲನೆಯಿಲ್ಲದ ಬಸ್ ಸಂಚಾರ, ಬಸ್‌ಗಳ ಕೊರತೆ ಹಾಗೂ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ತೊಂದರೆಗಳನ್ನು ತಕ್ಷಣವೇ ಪರಿಹರಿಸಬೇಕು ಎಂಬುದು ಪ್ರತಿಭಟನೆಯ ಮುಖ್ಯ ಬೇಡಿಕೆಯಾಗಿತ್ತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮುಳಿಯ ಸಾತ್ವಿಕ್, ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗುತ್ತಿದೆ ಎಂದು ಹೇಳಿದರು. ಗ್ರಾಮೀಣ ಭಾಗಗಳಿಂದ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ದಿನನಿತ್ಯ ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ವಿಷಾದಕರ ಸಂಗತಿ ಎಂದರು.
ಮುಳಿಯ ಸಾತ್ವಿಕ್ ಅವರು ಮುಂದುವರಿದು ಮಾತನಾಡುತ್ತಾ, ವಿದ್ಯಾರ್ಥಿಗಳ ಹಿತಕ್ಕಾಗಿ ಸದಾ ಹೋರಾಡುವ ಸಂಘಟನೆಯಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ವಿದ್ಯಾರ್ಥಿಗಳೊಂದಿಗೆ ಸದಾ ನಿಂತಿದೆ ಎಂದು ಹೇಳಿದರು. ಬಸ್ ಸಮಸ್ಯೆ ಪರಿಹಾರವಾಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿಗಳಾದ ಪುನಿತ್ ಎಚ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳ ಸಹನಶೀಲತೆಗೆ ಮಿತಿ ಇದೆ ಎಂದು ಹೇಳಿದರು. ಸಮಸ್ಯೆಯನ್ನು ತಕ್ಷಣವೇ ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಪ್ರೀತೇಶ್ ಕನ್ನೆಮರಡ್ಕ, ಶರಣ್ ಮೊಗ್ರ, ಅಮಿತ್ ನಾಯಕ್, ಹೋರಾಟ ಪ್ರಮುಖ್ ಕೀರ್ತನ್, ಮಾನ್ವಿತ್ ಸೇರಿದಂತೆ ಅನೇಕ ವಿದ್ಯಾರ್ಥಿ ನಾಯಕರು ಭಾಗವಹಿಸಿ ಕೆ.ಎಸ್.ಆರ್.ಟಿ.ಸಿ ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕೊನೆಯಲ್ಲಿ, ವಿದ್ಯಾರ್ಥಿಗಳ ನ್ಯಾಯ ಸಮ್ಮತ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನು ಶಾಂತಿಪೂರ್ಣವಾಗಿ ಮುಕ್ತಾಯಗೊಳಿಸಲಾಯಿತು.


