ಮಂಗಳೂರು : ವಿವಿಧ ಕಲಾ ಪ್ರಕಾರಗಳ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಅಭಿರುಚಿ ಮತ್ತು ಅಭಿಮಾನ ಮೂಡಿಸುವ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ. ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಹೇಳಿದರು.
ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಂಗಳೂರಿನ ತುಳುಭವನದಲ್ಲಿ ಆಯೋಜಿಸಲಾದ ‘ಜೋಕ್ಲೆ ಕಲಾ ಚಾತರ್ಪು’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಾಲಾ–ಕಾಲೇಜು ಹಂತದಲ್ಲೇ ತುಳು ಭಾಷೆ ಮತ್ತು ತುಳುನಾಡಿನ ಸಂಸ್ಕೃತಿಯ ಅರಿವನ್ನು ಯುವ ಜನತೆಗೆ ಮೂಡಿಸುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಕಾರ್ಯ ಅಭಿನಂದನೀಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ವಹಿಸಿದ್ದರು. ಸಮಾರಂಭದಲ್ಲಿ ನಿವೃತ್ತ ಉಪನ್ಯಾಸಕ ಪ್ರೊ. ಅಕ್ಷಯ ಕುಮಾರ್, ಸರಕಾರಿ ವೆನ್ಲಾಕ್ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಪದ್ಮನಾಭ ಅಮೀನ್, ಲಯನ್ಸ್ ಜಿಲ್ಲಾ ಸಂಯೋಜಕಿ ಆಶಾ ನಾಗರಾಜ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಗಾಗಿ ತುಳು ಭಾಷಣ, ತುಳು ಜನಪದ ಕತೆ ಹೇಳುವಿಕೆ, ತುಳು ಭಾವಗೀತೆ, ತುಳು ಜನಪದ ನೃತ್ಯ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಅಕಾಡೆಮಿಯ ಸದಸ್ಯೆ ಅಕ್ಷಯ ಆರ್. ಶೆಟ್ಟಿ ನಿರೂಪಿಸಿದರು. ಸದಸ್ಯ ಬೂಬ ಪುಜಾರಿ ಮಳಲಿ ಸ್ವಾಗತಿಸಿ, ಸದಸ್ಯ ಪಾಂಗಾಳ ಬಾಬು ಕೊರಗ ವಂದಿಸಿದರು.

