ಉಡುಪಿ : ಅಧಿಕಾರಿಗಳು ಕಾಂಗ್ರೆಸ್ ಪರಾಜಿತ ಅಭ್ಯರ್ಥಿಗಳ ಕೈಗೊಂಬೆಗಳಂತೆ ಕೆಲಸ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಉಡುಪಿ ಕಂಬಳಕ್ಕೆ ಇನ್ನೊಮ್ಮೆ ಭೂಮಿಪೂಜೆ ನಡೆಸಿದರೆ ತೀವ್ರ ಸ್ವರೂಪದ ಪ್ರತಿಭಟನೆ ನಡೆಸುತ್ತೇವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸುನಿಲ್ ಕುಮಾರ್ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಜಿಲ್ಲಾಡಳಿತ ಸಹಕಾರ ನೀಡುತ್ತಿಲ್ಲ. ಕಾಂಗ್ರೆಸ್ ಪರಾಜಿತ ಅಭ್ಯರ್ಥಿಗಳ ಕೈಗೊಂಬೆ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಕಂಬಳ ನಡೆಯಬಾರದು, ಅದರ ಕೀರ್ತಿ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಸಿಗಬಾರದು ಎನ್ನುವ ಕಾರಣಕ್ಕಾಗಿ ಅಧಿಕಾರಿಗಳ ಮೂಲಕ ಒತ್ತಡ ಹಾಕಿ ನಿರಂತರ ಅಡ್ಡಿಪಡಿಸುವ ಕೆಲಸ ನಡೆಯುತ್ತಿದೆ ಎಂದು ದೂರಿದರು.
ಉಡುಪಿ ಕಂಬಳಕ್ಕೆ ಅನುದಾನ ಕೊಡುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು. ಸರಕಾರ ಅನುದಾನ ಕೊಡಲಿ, ಬಿಡಲಿ ಕಂಬಳ ಸಮಿತಿ ನಿರ್ವಹಣೆ ಮಾಡುತ್ತದೆ ಎಂದು ಹೇಳಿದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಕಾಪು ಕ್ಷೇತ್ರದ ಅಭಿವೃದ್ಧಿ, ಜನಪರ ಕಾರ್ಯಕ್ಕೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅಡ್ಡಿಪಡಿಸಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಸಂಘರ್ಷದ ರಾಜಕೀಯ ಮುಂದುವರಿಸಿದರೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುತ್ತೇವೆ. ಕಾಪು ಕ್ಷೇತ್ರದಲ್ಲಿ ನಡೆಯುವ ಪ್ರತಿ ಅಭಿವೃದ್ಧಿ ಕೆಲಸಕ್ಕೂ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಅಧಿಕಾರಿಗಳನ್ನು ಬಳಸಿಕೊಂಡು ಒತ್ತಡ ಹಾಕಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ದೂರಿದರು.
6 ತಿಂಗಳ ಹಿಂದೆಯೇ ಎಸಿ, ಡಿಸಿ ಸಹಿತ ಸರಕಾರಿ ಅಧಿಕಾರಿಗಳು ಪರಿಶೀಲನೆ ನಡೆಸಿ ಗಡಿ ಗುರುತು ಮಾಡಿ 6.30 ಎಕರೆ ಭೂಮಿಯನ್ನು ಯುವಜನ ಸಬಲೀಕರಣ ಇಲಾಖೆಗೆ ಸರ್ಕಾರ ಮಂಜೂರು ಮಾಡಿದೆ. ಕರಾವಳಿಯ ಬಗ್ಗೆ ಅಸಡ್ಡೆ, ಅನುದಾನದ ಅಭಾವ ಮಂತ್ರಿಗಳ ಮಲತಾಯಿಧೋರಣೆ ಈ ಮೂಲಕ ಮತ್ತೊಮ್ಮೆ ಸಾಬೀತಾಗಿದೆ ಎಂದು ವಾಗ್ದಾಳಿ ನಡೆಸಿದರು.
ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕಂಬಳ ಸಮಿತಿ ರಚನೆ ಸ್ಥಳೀಯ ಶಾಸಕರ ಅಧ್ಯಕ್ಷತೆ ನಡೆಯುವುದು ಸಂಪ್ರದಾಯ. ಆದರೆ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಒತ್ತಡದ ಮೇಲೆ ಜಿಲ್ಲಾಡಳಿತ ಕಾನೂನು ಮೂಲಕ ಬೆದರಿಕೆ ಹಾಕುವ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಸಂಸದರು ಶಾಸಕರ ಮೇಲೆ ಕೇಸು ದಾಖಲಾಗಿದೆ. ಸರ್ಕಾರ ಕೆಟ್ಟ ಪರಂಪರೆಗೆ ನಾಂದಿ ಹಾಡಿದೆ. ಕಾಂಗ್ರೆಸ್ ಕುತಂತ್ರಕ್ಕೆ ಭಗ್ವ ಪ್ರಶ್ನೆ ಇಲ್ಲ ಕಂಬಳ ನಿಂತರೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಮಾಜಿ ಶಾಸಕರು ಕಾರಣ ಎಂದರು.
ಶಾಸಕರಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರ್, ಮಾಜಿ ಶಾಸಕ ಲಾಲಾಜಿ ಮೆಂಡನ್ ಉಪಸ್ಥಿತರಿದ್ದರು.

