ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕದ ಸುಮಾರು 25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆಯ ತೀವ್ರತೆ ಮುಂದುವರಿಯಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ನಿರ್ಮಾಣವಾದ ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಹಲವೆಡೆ ಈಗಾಗಲೇ ಅಕಸ್ಮಾತ್ ಮಳೆ ದಾಖಲಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲವೂ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.
ಮಲೆನಾಡು, ಕರಾವಳಿ ಹಾಗೂ ಒಳನಾಡಿನ ಅನೇಕ ಭಾಗಗಳಲ್ಲಿ ಮಾರ್ಚ್ 21ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಇತ್ತ ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲಿನ ಜೊತೆಗೆ ಮಧ್ಯಾಹ್ನದ ನಂತರ, ಸಂಜೆ ಹಾಗೂ ರಾತ್ರಿ ವೇಳೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಗಾಳಿಯ ಪ್ರಭಾವ ಹೆಚ್ಚಿದರೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

