ಫಿರೋಜ್ಪುರ : ಪಂಜಾಬ್‌ನ ಫಿರೋಜ್ಪುರ-ಫಾಜಿಲ್ಕಾ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಸದಸ್ಯರು ಸೇರಿದಂತೆ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜ್ಯದಾದ್ಯಂತ ಶೋಕದ ಛಾಯೆ ಮೂಡಿಸಿದೆ.
28 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವಾಹನ ಮತ್ತು ಟ್ರೈಲರ್ ನಡುವೆ ನಡೆದ ಮುಖಾಮುಖಿ ಡಿಕ್ಕಿ ಈ ದುರಂತಕ್ಕೆ ಕಾರಣವಾಗಿದ್ದು, ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತರು ಜಲಾಲಾಬಾದ್ ಮೂಲದ ಒಂದೇ ಕುಟುಂಬದ ಸದಸ್ಯರು ಹಾಗೂ ಅವರ ಆಪ್ತ ಸಂಬಂಧಿಕರು ಎಂದು ತಿಳಿದುಬಂದಿದೆ. ಕುಟುಂಬದ ವೃದ್ಧೆಯೊಬ್ಬರ ನಿಧನದ ಬಳಿಕ ನಡೆದ ಉತ್ತರ ಕ್ರಿಯೆಗಳನ್ನು ಮುಗಿಸಿ ತಮ್ಮ ಊರಿಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಮೂರು ಪುರುಷರು ಹಾಗೂ ಒಬ್ಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನುಳಿದವರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಹಾಗೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಲವರು ಗಂಭೀರ ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಕೆಲವರನ್ನು ಫರೀದ್ಕೋಟ್‌ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.

