ಬಂಟ್ವಾಳ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಕವಸ್ತು ಪ್ರಕರಣದಲ್ಲಿ ಸುಮಾರು ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸಿದ್ದಾರೆ.
ಬಂಧಿತನನ್ನು ಚಿಕ್ಕಮಗಳೂರು ಜಿಲ್ಲೆಯ ಸಂತೆ ಮಾರ್ಕೆಟ್ ರೋಡ್ ನಿವಾಸಿ ರಿಜ್ವಾನ್ ಪುತ್ರ ಎಂ.ಡಿ. ಸೈಫ್ ಅಲಿಯಾಸ್ ಮೊಹಮ್ಮದ್ ಸೈಫ್ (32) ಎಂದು ಗುರುತಿಸಲಾಗಿದೆ.
ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಅಕ್ರ : 98/2019, ಕಲಂ 27(b) NDPS ಕಾಯ್ದೆ ಹಾಗೂ ಬಂಟ್ವಾಳದ ಮಾನ್ಯ ಹಿರಿಯ ನ್ಯಾಯಾಲಯದ ಸಿಸಿ ನಂ. 08/2020 ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಪ್ರಕರಣದ ಬಳಿಕ ಸುಮಾರು ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಆ.13ರಂದು ಆರೋಪಿಯು ಕೇರಳ ರಾಜ್ಯದ ಮಂಜೇಶ್ವರದ ಕಡಂಬಾರು ಎಂಬಲ್ಲಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಬಂಟ್ವಾಳ ನ್ಯಾಯಾಲಯಕ್ಕೆ ಸಂಜೆ ಹಾಜರುಪಡಿಸಲಾಯಿತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 10 ಸಾವಿರ ರೂ. ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ.
ಈ ಕಾರ್ಯಾಚರಣೆಯನ್ನು ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಹಾಗೂ ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದೆ.
ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜೇಶ್ ಕೆ.ವಿ. ನೇತೃತ್ವದಲ್ಲಿ ಹೆಡ್ ಕಾನ್‌ಸ್ಟೆಬಲ್ ರಾಜೇಶ್, ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ಚೋಳಪ್ಪ ಸಂಶಿ ಹಾಗೂ ನಾಗರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

