3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸಿಸಿಬಿ ಬಲೆಗೆ

0
32

ಮಂಗಳೂರು : ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ಹಣಕಾಸು ವಂಚನೆ ಹಾಗೂ ಸುಲಿಗೆ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಮೂಲತಃ ಕೇರಳದ ಆಲಪ್ಪುಝ–ಕೊಲ್ಲಂ ನಿವಾಸಿಯಾಗಿದ್ದು, ಪ್ರಸ್ತುತ ಉತ್ತರ ಪ್ರದೇಶದ ಲಖನೌನಲ್ಲಿ ವಾಸವಾಗಿದ್ದ ಸ್ಯಾಮ್ ಪೀಟರ್ ಯಾನೆ ಡ್ಯಾನಿ ತಾರಕನ್ ಯಾನೆ ಆಂಟನಿ (64) ಎಂದು ಗುರುತಿಸಲಾಗಿದೆ.

ಆರೋಪಿ ತನ್ನದೇ ಗ್ಯಾಂಗ್ ರಚಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸುತ್ತಿದ್ದ ಎನ್ನಲಾಗಿದೆ. ಹಣಕಾಸು ವಿವಾದ, ಬ್ಯಾಂಕ್ ವಂಚನೆ ಹಾಗೂ ತೆರಿಗೆ ವಂಚನೆ ಪ್ರಕರಣಗಳಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು, ತಾನು ಅಧಿಕಾರ ಹೊಂದಿರುವ ಅಧಿಕಾರಿಯೆಂದು ನಂಬಿಸಿ ಅವರಿಂದ ಹಣ ಪಡೆದು ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮಂಗಳೂರು ಕದ್ರಿ ಪೊಲೀಸರು 2019ರ ಆಗಸ್ಟ್ 16ರಂದು ಪಂಪ್‌ವೆಲ್‌ನಲ್ಲಿರುವ ಲಾಡ್ಜ್‌ವೊಂದರ ಮೇಲೆ ಕಾರ್ಯಾಚರಣೆ ನಡೆಸಿ ಸ್ಯಾಮ್ ಪೀಟರ್ ಸೇರಿದಂತೆ ಆತನ ಗ್ಯಾಂಗ್‌ನ ಎಂಟು ಮಂದಿಯನ್ನು ಬಂಧಿಸಿದ್ದರು. ಬಳಿಕ ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದ. ಆದರೆ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಹಲವು ಹೆಸರುಗಳಲ್ಲಿ ವಾಸಿಸುತ್ತಿದ್ದ ಆರೋಪಿ

ತನ್ನ ನೈಜ ಗುರುತನ್ನು ಮರೆಮಾಚಲು ಆರೋಪಿ ವಿವಿಧೆಡೆಗಳಲ್ಲಿ ಹಲವು ಹೆಸರುಗಳನ್ನು ಬಳಸಿಕೊಂಡು ವಾಸಿಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಆಂಟನಿ, ರಾಹುಲ್ ಪೀಟರ್, ಸ್ಯಾಮ್ ಪೀಟರ್, ರಾಜೇಶ್ ರಾಬಿನ್ಸನ್, ರೀತು ರಿಚರ್ಡ್, ರಾಯ್ ಜೇಕಬ್, ರಾಬಿನ್ ರಿಚರ್ಡ್ಸನ್, ರಾಬಿನ್ ಸನ್, ಆಂಟೋನಿ ಪ್ರಾನ್ಸಿಸ್, ಶಾರೂನ್ ಪ್ರಾನ್ಸಿಸ್ ಹಾಗೂ ಡ್ಯಾನಿ ತಾರಕನ್ ಸೇರಿದಂತೆ ಒಟ್ಟು 11 ಹೆಸರುಗಳನ್ನು ಬಳಸಿಕೊಂಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಒಂದು ಸ್ಥಳದಲ್ಲಿ ಅಪರಾಧ ಎಸಗಿದ ಬಳಿಕ ಮತ್ತೊಂದು ಸ್ಥಳಕ್ಕೆ ತೆರಳಿ ಹೆಸರು ಬದಲಾಯಿಸಿಕೊಂಡು ವಾಸಿಸುವ ಪ್ರವೃತ್ತಿಯನ್ನು ಆರೋಪಿ ಹೊಂದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

2001ರಿಂದ ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್

ಆರೋಪಿ ಸ್ಯಾಮ್ ಪೀಟರ್ ಕುಖ್ಯಾತ ವಂಚಕನಾಗಿದ್ದು, ‘ರಾಹುಲ್ ಪೀಟರ್’ ಎಂಬ ಅಲಿಯಾಸ್ ಹೆಸರಿನಲ್ಲಿ ಆತನ ವಿರುದ್ಧ 2001ರಿಂದ ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿಯಲ್ಲಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ.

ವಿವಿಧ ರಾಜ್ಯಗಳಲ್ಲಿ 17 ಪ್ರಕರಣಗಳು

ಆರೋಪಿಯ ವಿರುದ್ಧ ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಕೊಣಾಜೆ ಪೊಲೀಸ್ ಠಾಣೆ, ಚಿಕ್ಕಬಳ್ಳಾಪುರ, ಬೆಂಗಳೂರು, ಉಡುಪಿ ನಗರ ಹಾಗೂ ಕುಶಾಲನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಇದರ ಜೊತೆಗೆ ಬಿಹಾರ, ತಮಿಳುನಾಡು, ಮಹಾರಾಷ್ಟ್ರ, ಉತ್ತರ ಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿಯೂ ಮೋಸ ಮತ್ತು ವಂಚನೆ ಸೇರಿದಂತೆ ಸುಮಾರು 17 ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ.

ಮಂಗಳೂರು ಉಳ್ಳಾಲ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಆರೋಪಿಯ ವಿರುದ್ಧ 17 ಬಾರಿ ವಾರೆಂಟ್ ಹೊರಡಿಸಲಾಗಿದ್ದು, ಮಂಗಳೂರು ಪೂರ್ವ ಠಾಣೆಯ ಪ್ರಕರಣದಲ್ಲಿ 14 ಬಾರಿ ವಾರೆಂಟ್ ಹೊರಡಿಸಿದ ಬಳಿಕ ಪ್ರೊಕ್ಲಮೇಷನ್ (ಉದ್ಘೋಷಣೆ) ಹೊರಡಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಕೊನೆಗೂ ಸಿಸಿಬಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

ಆರೋಪಿಯ ಪತ್ತೆ ಮತ್ತು ಬಂಧನ ಕಾರ್ಯಾಚರಣೆಯಲ್ಲಿ ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.