ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ; 9 ಪದಕಗಳ ಬೇಟೆ

0
4

ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅಮೋಘ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾಭಾರತಿಯ ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿದ್ಯಾರ್ಥಿನಿಯರು ಒಟ್ಟು 6 ಚಿನ್ನ, 1 ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಈ ಹಿಂದೆ ನಡೆದ ಸ್ಪರ್ಧೆಗಳಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ ಅವರು 100 ಮೀಟರ್ ಓಟದಲ್ಲಿ ಬೆಳ್ಳಿ ಹಾಗೂ ಮೋಕ್ಷಿತ್ ಅವರು ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಗೆದ್ದಿದ್ದರು.

ಕ್ರೀಡಾಕೂಟದ ಕೊನೆಯ ದಿನವೂ ವಿದ್ಯಾರ್ಥಿನಿಯರು ಪದಕಗಳ ಬೇಟೆ ಮುಂದುವರಿಸಿದರು. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಗುಣಶ್ರೀ ಅವರು 100 ಮೀಟರ್ ಹರ್ಡಲ್ಸ್‌ನಲ್ಲಿ ಚಿನ್ನ, 400 ಮೀಟರ್ ಹರ್ಡಲ್ಸ್‌ನಲ್ಲಿ ಕಂಚು ಹಾಗೂ 4×100 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗಳಿಸಿದರು. ಇವರು ದೇವುಮೂಲೆಯ ಶ್ರೀನಿವಾಸ ನಾಯ್ಕ್ ಮತ್ತು ಹೇಮಾವತಿ ದಂಪತಿಯ ಪುತ್ರಿ.

ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ದಿವಿಜ್ಞಾ ಅವರು 200 ಮೀಟರ್ ಓಟದಲ್ಲಿ ಚಿನ್ನ, 400 ಮೀಟರ್ ಓಟದಲ್ಲಿ ಬೆಳ್ಳಿ ಹಾಗೂ 4×100 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಇವರು ಮಲಾರ್‌ನ ಶಿವಪ್ರಸಾದ್ ಯು.ಎ. ಮತ್ತು ಪವಿತ್ರ ದಂಪತಿಯ ಪುತ್ರಿ.

ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪ್ರತೀಕ್ಷಾ ಅವರು 4×100 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದರು. ಇವರು ಮೂಡಂಬೈಲ್‌ನ ಎಂ. ಬಾಲಕೃಷ್ಣ ಮತ್ತು ಶಶಿಕಲಾ ದಂಪತಿಯ ಪುತ್ರಿ.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ ಅವರು 4×100 ಮೀಟರ್ ರಿಲೇಯಲ್ಲಿ ಚಿನ್ನ ಹಾಗೂ 200 ಮೀಟರ್ ಓಟದಲ್ಲಿ ಕಂಚಿನ ಪದಕ ಗಳಿಸಿದರು. ಇವರು ಮೇರ್ಲದ ಎ. ಉದಯ ಶೆಟ್ಟಿ ಮತ್ತು ಸುನಿತಾ ಯು. ಶೆಟ್ಟಿ ದಂಪತಿಯ ಪುತ್ರಿ.

ವಿದ್ಯಾರ್ಥಿನಿಯರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಹಾಗೂ ಯತೀಶ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದರು. ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.