ಗ್ರಾಮ ಪಂಚಾಯ್ತಿಗಳ ಸಕ್ರಿಯ ಕಾರ್ಯನಿರ್ವಹಣೆ ಗ್ರಾಮಸ್ಥರ ಜವಾಬ್ದಾರಿ – ಪಿಡಿಒ ಗಣೇಶ್ ಶೆಟ್ಟಿ

0
8

ಮೂಡುಬಿದಿರೆ : ಶ್ರೀ ಮಹಾವೀರ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಒರಿಯೆಂಟೇಶನ್ ಕಾರ್ಯಕ್ರಮದ ಅಂಗವಾಗಿ, ಆರಂಬೋಡಿ ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಪ್ರಭಾರ ಸಹಾಯಕ ನಿರ್ದೇಶಕರಾಗಿರುವ ಗಣೇಶ್ ಶೆಟ್ಟಿ ಅವರು “ಪಂಚಾಯತ್ ರಾಜ್ ವ್ಯವಸ್ಥೆ ಮತ್ತು ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ” ಕುರಿತು ವಿಶೇಷ ಉಪನ್ಯಾಸ ನೀಡಿದರು.

ಉಪನ್ಯಾಸದಲ್ಲಿ ಮಾತನಾಡಿದ ಅವರು, ಅಧಿಕಾರ ವಿಕೇಂದ್ರೀಕರಣದ ಉದ್ದೇಶದಿಂದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಪ್ರಜಾಪ್ರಭುತ್ವದ ಯಶಸ್ಸಿಗೆ ನಾಗರಿಕರ ಸಕ್ರಿಯ ಭಾಗವಹಿಸುವಿಕೆ ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬ ಅರ್ಹ ಮತದಾರನು ಜವಾಬ್ದಾರಿಯುತವಾಗಿ ಮತದಾನ ಮಾಡಬೇಕು ಹಾಗೂ ಅಗತ್ಯವಿದ್ದರೆ ಚುನಾವಣೆಗೆ ಸ್ಪರ್ಧಿಸಿ ಗ್ರಾಮದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಗ್ರಾಮಸಭೆ ಹಾಗೂ ವಾರ್ಡ್ ಸಭೆಗಳು ಸ್ಥಳೀಯ ಆಡಳಿತದ ಪ್ರಮುಖ ವೇದಿಕೆಗಳಾಗಿದ್ದು, ಜನರು ಈ ಸಭೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಗ್ರಾಮದ ಸಮಸ್ಯೆಗಳು, ಅಭಿವೃದ್ಧಿ ಯೋಜನೆಗಳು ಹಾಗೂ ಆಡಳಿತದ ಕುರಿತು ಅಭಿಪ್ರಾಯ ವ್ಯಕ್ತಪಡಿಸಬೇಕು ಎಂದು ಅವರು ತಿಳಿಸಿದರು.

“ಪ್ರಜೆಗಳಾಗಿ ನಮ್ಮ ಗ್ರಾಮದ ಅಭಿವೃದ್ಧಿಯಲ್ಲಿ ಆಗುವ ಲೋಪದೋಷಗಳನ್ನು ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು. ಮಾಹಿತಿ ಹಕ್ಕು ಕಾಯ್ದೆಯಡಿ ಅಗತ್ಯ ಮಾಹಿತಿಗಳನ್ನು ಪಡೆದು, ಸಾರ್ವಜನಿಕ ಗ್ರಂಥಾಲಯಗಳ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು,” ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇದೇ ವೇಳೆ, ಪದವಿ ಹಾಗೂ ಪದವಿಯ ನಂತರ ಗ್ರಾಮ ಪಂಚಾಯತ್‌ಗಳಿಗೆ ಸಂಬಂಧಿಸಿದ ಸರ್ಕಾರಿ ಮತ್ತು ಅರೆ ಸರ್ಕಾರಿ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದ ಅವರು, ಗ್ರಾಮ ಪಂಚಾಯತ್ ಜನರ ಅಗತ್ಯಗಳನ್ನು ಸಮರ್ಪಕವಾಗಿ ಪೂರೈಸುವಂತೆ ಕಾರ್ಯನಿರ್ವಹಿಸಲು ಪ್ರಜೆಗಳ ಸಹಭಾಗಿತ್ವ ಅತ್ಯಗತ್ಯ ಎಂದು ಹೇಳಿದರು.

ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಮಾತನಾಡಿದ ಗಣೇಶ್ ಶೆಟ್ಟಿ, ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗುವುದು ಪ್ರಜಾಪ್ರಭುತ್ವದ ಬಲವರ್ಧನೆಗೆ ಅಗತ್ಯವಾಗಿದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಕರೆ ನೀಡಿದ ಅವರು, (Special Intensive Revision) ಅರ್ಜಿ ಭರ್ತಿ ಮಾಡುವ ವಿಧಾನದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕಿ ದೀಕ್ಷಾ ಉಪಸ್ಥಿತರಿದ್ದರು. ಉಪನ್ಯಾಸಕಿ ರಾಧಿಕಾ ರಾವ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.