ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆಧರಿತವೆನ್ನಲಾದ ‘ಬಾಸ್’ ಚಿತ್ರ ಬಿಡುಗಡೆಗೆ ನಟ ದರ್ಶನ್ ತಡೆಯಾಜ್ಞೆ ತಂದಿದ್ದಾರೆ.
ದರ್ಶನ್ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆಧಾರಿತ ಎನ್ನಲಾದ ಕನ್ನಡದ ‘ಬಾಸ್’ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ನೀಡಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಬಾಸ್’ ಸಿನಿಮಾ ಬಿಡುಗಡೆ ಮಾಡದಂತೆ ಚಿತ್ರದ ನಿರ್ಮಾಪಕರು, ನಿರ್ದೇಶಕರು, ವಿತರಕರು ಮತ್ತು ಪ್ರದರ್ಶಕರಿಗೆ ನಿರ್ದೇಶನ ನೀಡುವಂತೆ ಕೋರಿ ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ದರ್ಶನ್ ಸಲ್ಲಿಸಿದ್ದ ಮೂಲ ದಾವೆ ವಿಚಾರಣೆ ನಡೆಸಿದ ನಗರದ 16ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಈ ಆದೇಶ ನೀಡಿದೆ.
ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಆಧರಿಸಿದ ಅಥವಾ ದಾವೆದಾರರ ಜೀವನ ಉಲ್ಲೇಖಿಸುವಂತಹ ಅವರ ಜೀವನಕ್ಕೆ ಸಂಬಂಧಿಸಿದ ಅವರ ಕುಟುಂಬ ಮತ್ತು ಗೌರವಕ್ಕೆ ತೇಜೋವಧೆ ಉಂಟು ಮಾಡುವಂತಹ ವಿವಾದಿತ ‘ಬಾಸ್’ ಚಿತ್ರವನ್ನು ಚಿತ್ರಮಂದಿರ ಅಥವಾ ಒಟಿಟಿ ಮೂಲಕ ಬಿಡುಗಡೆ ಮಾಡಬಾರದು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.
ಚಿತ್ರದ ನಿರ್ಮಾಪಕರು, ನಿರ್ದೇಶಕರಿಗೆ ಸಮನ್ಸ್ ಜಾರಿಗೊಳಿಸಿ ದಾವೆ ವಿಚಾರಣೆಯನ್ನು ಮೇ 2ಕ್ಕೆ ಮುಂದೂಡಲಾಗಿದೆ. 2024ರ ಏಪ್ರಿಲ್ 14ರಂದು ‘ಬಾಸ್’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಸಿದ್ಧವಾಗಿತ್ತು. ಈ ಚಿತ್ರ ರೇಣುಕಾಸ್ವಾಮಿ ಕೊಲೆ ಪ್ರಕರಣ ಆಧರಿಸಿದೆ. ಸಿನಿಮಾ ಬಿಡುಗಡೆಯಾದರೆ ತಮ್ಮ ಘನತೆ ಗೌರವಕ್ಕೆ ಧಕ್ಕೆಯಾಗುತ್ತದೆ. ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ಅಡ್ಡಿಯಾಗುತ್ತದೆ. ಹೀಗಾಗಿ ಸಿನಿಮಾ ಬಿಡುಗಡೆ ಮಾಡದಂತೆ ಆದೇಶಿಸಬೇಕೆಂದು ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ನ್ಯಾಯಾಲಯಕ್ಕೆ ದಾವೆ ಸಲ್ಲಿಸಿದ್ದಾರೆ.

