ಮಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸಲಾಗಿದೆ. ವಿಮಾನ ನಿಲ್ದಾಣದಾದ್ಯಂತ ಹೆಚ್ಚುವರಿ ಕಡ್ಡಾಯ ತಪಾಸಣೆಗಳನ್ನು ನಡೆಸಲಾಗುತ್ತಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗಿದೆ ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.
ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವಂತೆ ಸೂಚಿಸಲಾಗಿದೆ. ಪ್ರಯಾಣದ ವೇಳೆ ಅಗತ್ಯವಿರುವ ಗುರುತಿನ ಚೀಟಿ, ಟಿಕೆಟ್ ಸೇರಿದಂತೆ ಸಂಬಂಧಿತ ದಾಖಲೆಗಳನ್ನು ಸುಲಭವಾಗಿ ಲಭ್ಯವಾಗುವಂತೆ ಇಟ್ಟುಕೊಳ್ಳುವಂತೆ ಮನವಿ ಮಾಡಲಾಗಿದೆ.
ಹೆಚ್ಚುವರಿ ಭದ್ರತಾ ತಪಾಸಣೆಗಳಿಂದಾಗಿ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಸಮಯ ತಗಲುವ ಸಾಧ್ಯತೆ ಇರುವುದರಿಂದ ಪ್ರಯಾಣಿಕರು ಭದ್ರತಾ ಪ್ರಕ್ರಿಯೆಗಳಿಗೆ ಹೆಚ್ಚುವರಿ ಸಮಯ ಮೀಸಲಿಡುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಕಟ್ಟುನಿಟ್ಟುಗೊಳಿಸಲಾಗಿದ್ದು, ಮಂಗಳೂರು ವಿಮಾನ ನಿಲ್ದಾಣದಲ್ಲಿಯೂ ಪ್ರಯಾಣಿಕರ ತಪಾಸಣೆ ಸೇರಿದಂತೆ ವಿವಿಧ ಹಂತಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

