ಎಸ್.ಸಿ. ಎಸ್.ಟಿ. ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಅಹಿಂದ ಬಳಗದಿಂದ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಮನವಿ

0
4

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಕೊಡುಗೆ ಮಹತ್ವದ್ದಾಗಿದ್ದು, ಈ ಸಮುದಾಯಗಳಿಗೆ ನಿಗಮ ಮಂಡಳಿ ಅಧ್ಯಕ್ಷರು, ನಿರ್ದೇಶಕರ ಸ್ಥಾನ ಸೇರಿದಂತೆ ಸರ್ಕಾರದ ನಾಮನಿರ್ದೇಶನ ಮತ್ತು ಪಕ್ಷದ ಹುದ್ದೆಗಳಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕೆಂದು ಕೊಡಗು ಅಹಿಂದ ಬಳಗ ಒತ್ತಾಯಿಸಿದೆ.

ಈ ಸಂಬಂಧ ಕೊಡಗು ಅಹಿಂದ ಬಳಗದ ಜಿಲ್ಲಾಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾದ ನಾಪಂಡ ಮುತ್ತಪ್ಪ ಅವರ ನೇತೃತ್ವದಲ್ಲಿ ಕುಶಾಲನಗರದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿತು

ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಬಹುಸಂಖ್ಯಾತ ಮತ್ತು ಮೂಲ ಮತದಾರರಾಗಿದ್ದರೂ, ಪಕ್ಷದ ಹುದ್ದೆಗಳು ಹಾಗೂ ಸರ್ಕಾರದ ನಾಮ ನಿರ್ದೇಶನಗಳನ್ನು ನೀಡುವ ಸಂದರ್ಭದಲ್ಲಿ ಈ ವರ್ಗಗಳನ್ನು ಪರಿಗಣಿಸುತ್ತಿಲ್ಲ. ಇದರಿಂದಾಗಿ ಈ ಸಮುದಾಯಗಳು ಕಾಂಗ್ರೆಸ್ ಪಕ್ಷದಲ್ಲಿ ಕಡೆಗಣಿಸಲ್ಪಟ್ಟಿವೆ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ. ರಾಜ್ಯ ಸರ್ಕಾರದ ಉಳಿದ ಅವಧಿಯಲ್ಲಿ ಸೂಕ್ತ ಸ್ಥಾನಮಾನಗಳನ್ನು ನೀಡುವಂತೆ ಅಹಿಂದ ಬಳಗ ಮನವಿ ಮಾಡಿದೆ. ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ತಲಾ ಒಬ್ಬರಂತೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ತಲಾ ಒಬ್ಬರಂತೆ ನಿಗಮ ಮಂಡಳಿಯ ನಿರ್ದೇಶಕರ ಸ್ಥಾನ ಕಲ್ಪಿಸಬೇಕು.

ಕೊಡಗು ಜಿಲ್ಲೆಯ ಐದು ಅನುಷ್ಠಾನ ಸಮಿತಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ತಲಾ ಒಬ್ಬರಂತೆ ಅಧ್ಯಕ್ಷ ಸ್ಥಾನ ನೀಡಬೇಕು. ಕೊಡಗು ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಪರಿಶಿಷ್ಟ ಜಾತಿ ಸಮುದಾಯಕ್ಕೆ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಪ್ರಾತಿನಿಧ್ಯದ ದೃಷ್ಟಿಯಿಂದ ಅಹಿಂದ ಸಮುದಾಯಗಳಿಗೆ ಸೂಕ್ತ ಸ್ಥಾನಮಾನ ಕಲ್ಪಿಸುವ ಮೂಲಕ ಪಕ್ಷದ ಸಂಘಟನೆಗೆ ಹೆಚ್ಚಿನ ಬಲ ನೀಡಬೇಕು. ಈ ನಿಟ್ಟಿನಲ್ಲಿ ಅಹಿಂದ ಬಳಗದ ಮನವಿಯನ್ನು ಪುರಸ್ಕರಿಸುವಂತೆ ನಾಪಂಡ ಮುತ್ತಪ್ಪ ಕೋರಿದರು.

ಮನವಿ ಸಲ್ಲಿಸುವ ಸಂದರ್ಭ ಕೊಡಗು ಅಹಿಂದ ಬಳಗದ ಪ್ರಧಾನ ಕಾರ್ಯದರ್ಶಿ ಟಿ.ಈ. ಸುರೇಶ್, ಉಪಾಧ್ಯಕ್ಷ ಅರುಣ್ ರಾವ್, ಸಂಘಟನಾ ಕಾರ್ಯದರ್ಶಿ ರವಿ ಅಜ್ಜಳ್ಳಿ, ಸದಸ್ಯರಾದ ರಜಾಕ್ ಕುಶಾಲನಗರ ಹಾಗೂ ಶಾಹಿದ್ ಹಾಜರಿದ್ದರು.

ವರದಿ: ಪ್ರಿತುನ್ ಪೂವಣ್ಣ