ಉಡುಪಿ : ಮಂಗಳೂರು ಆಕಾಶವಾಣಿಯ ಉಡುಪಿಯ ನೂತನ ಎಫ್ಎಂ ಟ್ರಾನ್ಸ್ಮಿಷನ್ ಕೇಂದ್ರವನ್ನು ಕೇಂದ್ರ ರೈಲ್ವೆ ಹಾಗೂ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ಲೋಕಾರ್ಪಣೆಗೊಳಿಸಿದರು. ಈ ಮೂಲಕ ಉಡುಪಿ ಜಿಲ್ಲೆಯ ಆಕಾಶವಾಣಿ ಕೇಳುಗರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ.
ಸುಮಾರು ₹2.85 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಕೇಂದ್ರವು 1 ಕಿಲೋವ್ಯಾಟ್ ಸಾಮರ್ಥ್ಯ ಹೊಂದಿದ್ದು, 101.9 ಮೆಗಾಹರ್ಟ್ಸ್ ತರಂಗಾಂತರದಲ್ಲಿ ಪ್ರಸಾರ ಸೇವೆ ಒದಗಿಸಲಿದೆ. ಸುಮಾರು 30 ಕಿ.ಮೀ. ವ್ಯಾಪ್ತಿಯಲ್ಲಿ ಎಫ್ಎಂ ಪ್ರಸಾರ ಲಭ್ಯವಾಗಲಿದ್ದು, ಉಡುಪಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಆಕಾಶವಾಣಿ ಶ್ರೋತೃಗಳಿಗೆ ಅನುಕೂಲವಾಗಲಿದೆ.

ಕಾರ್ಯಕ್ರಮದಲ್ಲಿ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಯಶ್ಪಾಲ್ ಸುವರ್ಣ, ಗುರುರಾಜ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಅನುಮತಿ ಅಗತ್ಯವಿದೆ ಎಂದು ತಿಳಿಸಿದರು.
ಕೊಂಕಣ ರೈಲ್ವೆ ಮಾರ್ಗದಲ್ಲಿ ಸುಮಾರು ಹತ್ತು ರೈಲು ನಿಲ್ದಾಣಗಳ ಜೋಡಿ ಹಳಿ ಕಾಮಗಾರಿ ಹಾಗೂ ಎರಡು ಸುರಂಗ ಮಾರ್ಗಗಳ ಯೋಜನೆಯನ್ನು ಪೂರ್ಣಗೊಳಿಸುವ ಉದ್ದೇಶವಿದೆ. ಬೈಂದೂರು ಮತ್ತು ಬಾರ್ಕೂರು ರೈಲು ನಿಲ್ದಾಣಗಳನ್ನು ಉನ್ನತೀಕರಿಸುವ ಕುರಿತು ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

