ಗ್ರಾಮ ಒನ್ ಕೇಂದ್ರಗಳಲ್ಲಿ ಮನಬಂದಂತೆ ಶುಲ್ಕ ವಸೂಲಿ ಆರೋಪ : ನಿಗದಿತ ಶುಲ್ಕವನ್ನೇ ಪಡೆಯಲು ಜಿಲ್ಲಾಧಿಕಾರಿಗಳಿಗೆ ಮನವಿ

0
158

ಕುಂದಾಪುರ : ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಸರ್ಕಾರಿ ಸೇವೆಗಳು ಹಾಗೂ ಯೋಜನೆಗಳ ಅರ್ಜಿಗಳಿಗೆ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ಮನಬಂದಂತೆ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಅಂಗವಿಕಲ ವೇತನ, ವಿಧವಾ ವೇತನ, ವಿದ್ಯಾರ್ಥಿವೇತನ, ಸಂಧ್ಯಾ ಸುರಕ್ಷಾ ಯೋಜನೆ, ವೃದ್ಧಾಪ್ಯ ವೇತನ, ವಂಶವೃಕ್ಷ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಪಡಿತರ ಚೀಟಿ ತಿದ್ದುಪಡಿ, ಮತದಾರರ ಗುರುತಿನ ಚೀಟಿ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಸೇವೆಗಳ ಅರ್ಜಿಗಳಿಗೆ ₹100, ₹150, ₹200ರಿಂದ ₹500ರವರೆಗೆ ಹಣ ವಸೂಲಿ ಮಾಡಲಾಗುತ್ತಿದೆ ಎಂದು ದೂರಲಾಗಿದೆ. ತ್ರಿಚಕ್ರ ವಾಹನ, ಈ-ಶ್ರಮ್ ಕಾರ್ಡ್ ಸೇರಿದಂತೆ ವಿವಿಧ ಯೋಜನೆಗಳ ಅರ್ಜಿಗಳಿಗೂ ಹೆಚ್ಚುವರಿ ಶುಲ್ಕ ಪಡೆಯಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಜನರಿಗೆ ಅನಗತ್ಯ ಆರ್ಥಿಕ ಹೊರೆ ಉಂಟಾಗುತ್ತಿದ್ದು, ಗ್ರಾಮ ಒನ್ ಕೇಂದ್ರಗಳಲ್ಲಿ ನಾಮಫಲಕದಲ್ಲಿ ನಮೂದಿಸಿರುವ ನಿಗದಿತ ಶುಲ್ಕವನ್ನೇ ಪಡೆಯುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಅಲ್ಲದೆ, ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಕೇಂದ್ರಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕರಿಗೆ ನ್ಯಾಯ ಒದಗಿಸಬೇಕು ಎಂದು ಭಟ್ರುಪಾಲು, ಮಚ್ಚಟ್ಟು ಗ್ರಾಮದ ಗಣಪತಿ ಪೂಜಾರಿ ಅವರು ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಉಡುಪಿ ಜಿಲ್ಲಾಧಿಕಾರಿಗಳು, ರಜತಾದ್ರಿ, ಮಣಿಪಾಲ ಅವರು ಸೂಕ್ತ ಕ್ರಮ ಕೈಗೊಂಡು ಗ್ರಾಮ ಒನ್ ಕೇಂದ್ರಗಳ ಶುಲ್ಕ ವಸೂಲಾತಿ ವ್ಯವಸ್ಥೆಯನ್ನು ಪರಿಶೀಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.