ಬೋಟಿನಲ್ಲಿನ ಗಲಾಟೆ ಕೊಲೆಯಲ್ಲಿ ಅಂತ್ಯ : ಮಲ್ಪೆಯಲ್ಲಿ ಅಭಿಷೇಕ್ ಹತ್ಯೆ

0
12

ಉಡುಪಿ : ಮಲ್ಪೆ ಪಡುಕೆರೆ ದಕ್ಕೆಯಲ್ಲಿ ಬೋಟಿನಲ್ಲಿ ನಡೆದ ಗಲಾಟೆ ವೇಳೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ. ಮೃತರನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಎಂಬಾತನನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸೋಮವಾರ ರಾತ್ರಿ ಬೋಟಿನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಮಂಗಳವಾರ ಬೆಳಗಿನ ಜಾವ ಇಬ್ಬರ ನಡುವೆ ಮತ್ತೆ ಗಲಾಟೆ ನಡೆದಿದ್ದು, ಈ ವೇಳೆ ಗೋವಿಂದ ಅಭಿಷೇಕ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದ. ಈ ಕುರಿತು ಮಾಹಿತಿ ದೊರೆತ ತಕ್ಷಣ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ (ಕಾ.ಸು.) ಅನಿಲ್ ಕುಮಾರ್ ಡಿ. ಅವರು ಸಿಬ್ಬಂದಿಗಳಾದ ಹೆಚ್‌ಸಿ ಆದರ್ಶ ಹಾಗೂ ಪಿಸಿ ಕುಬೇರ ಅವರೊಂದಿಗೆ ಆರೋಪಿಯ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದರು.

ಪೊಲೀಸರ ತನಿಖೆಯ ವೇಳೆ ಗೋವಿಂದ ಉಡುಪಿಯತ್ತ ತೆರಳಿರುವ ಮಾಹಿತಿ ಲಭ್ಯವಾಗಿದ್ದು, ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಉಡುಪಿ ರೈಲು ನಿಲ್ದಾಣದ ಬಳಿ ಆತನನ್ನು ಪತ್ತೆಹಚ್ಚಿದ್ದಾರೆ. ಹೈದರಾಬಾದ್ ಅಥವಾ ಮುಂಬೈ ಕಡೆಗೆ ರೈಲಿನಲ್ಲಿ ತೆರಳಲು ಮುಂದಾಗಿದ್ದ ವೇಳೆ ಗೋವಿಂದನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

15 ವರ್ಷಗಳಿಂದ ಮನೆಗೆ ತೆರಳಿರಲಿಲ್ಲ

ಆರೋಪಿಯ ವಿಚಾರಣೆ ವೇಳೆ ಗೋವಿಂದ ಕಳೆದ ಸುಮಾರು 15 ವರ್ಷಗಳಿಂದ ತನ್ನ ಮನೆಗೆ ತೆರಳದೆ ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧೆಡೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾಗಿ ತಿಳಿದುಬಂದಿದೆ. ಇತ್ತೀಚೆಗೆ ಮಲ್ಪೆ ಭಾಗದಲ್ಲಿ ಬೋಟಿನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಕೊಲೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಬೋಟಿನಲ್ಲಿ ನಡೆದ ಗಲಾಟೆಯ ಹಿನ್ನೆಲೆ, ಆರೋಪಿಗೆ ಹಾಗೂ ಮೃತರಿಗೆ ಇದ್ದ ಸಂಬಂಧ, ಘಟನೆಗೆ ಬಳಸಿದ ವಸ್ತು ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಿಚಾರಣೆಗೊಳಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.