ಉಡುಪಿ : ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ನಲ್ಲಿ ರಾಜ್ಯದ ಪ್ರತಿಷ್ಠಿತ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ 16ನೇ ಆವೃತ್ತಿ ಆಗಸ್ಟ್ 7 ಮತ್ತು 8ರಂದು ನಡೆಯಲಿದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
2007ರಿಂದ ನಿರಂತರವಾಗಿ ಆಯೋಜಿಸಲಾಗುತ್ತಿರುವ ಆಳ್ವಾಸ್ ಪ್ರಗತಿ, ಉದ್ಯೋಗಾಕಾಂಕ್ಷಿಗಳು ಮತ್ತು ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ಕಂಪನಿಗಳನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ವಿಶ್ವಾಸಾರ್ಹ ಉದ್ಯೋಗ ಮೇಳವಾಗಿ ಗುರುತಿಸಿಕೊಂಡಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಾಮಾಜಿಕ ಹೊಣೆಗಾರಿಕೆ ಯೋಜನೆಯ ಅಂಗವಾಗಿ ಮೇಳವನ್ನು ಸಂಪೂರ್ಣ ಉಚಿತವಾಗಿ ಆಯೋಜಿಸಲಾಗುತ್ತಿದೆ ಎಂದರು.
ಉದ್ಯೋಗ ಮೇಳದಲ್ಲಿ ಈಗಾಗಲೇ 276ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಸುಮಾರು 15,860ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿರಲಿವೆ. ಡಿಪ್ಲೊಮಾ ಹಾಗೂ ಐಟಿಐ ಅಭ್ಯರ್ಥಿಗಳಿಗೆ ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗಾವಕಾಶಗಳಿವೆ. ಮಹಿಳಾ ಅಭ್ಯರ್ಥಿಗಳಿಗಾಗಿ ಟಾಟಾ ಎಲೆಕ್ಟ್ರಾನಿಕ್ಸ್ ವಿಶೇಷ ನೇಮಕಾತಿ ಅಭಿಯಾನ ಹಮ್ಮಿಕೊಂಡಿದೆ ಎಂದರು.
ಕಳೆದ ವರ್ಷದ ಆಳ್ವಾಸ್ ಪ್ರಗತಿಯಲ್ಲಿ 2,873 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ ದೊರೆತಿದ್ದು, 3,734 ಮಂದಿ ಮುಂದಿನ ಹಂತದ ನೇಮಕಾತಿಗೆ ಆಯ್ಕೆಯಾಗಿದ್ದರು. ಇದುವರೆಗೆ ಒಟ್ಟು 40,848 ಅಭ್ಯರ್ಥಿಗಳು ಸ್ಥಳದಲ್ಲೇ ಉದ್ಯೋಗ ಪಡೆದಿದ್ದು, 66,432ಕ್ಕೂ ಹೆಚ್ಚು ಅಭ್ಯರ್ಥಿಗಳು ವಿವಿಧ ಸಂಸ್ಥೆಗಳಲ್ಲಿ ಮುಂದಿನ ಹಂತಕ್ಕೆ ಶಾರ್ಟ್ಲಿಸ್ಟ್ ಆಗಿದ್ದಾರೆ. ಹೊರ ಜಿಲ್ಲೆಗಳಿಂದ ಆಗಮಿಸುವ ಅಭ್ಯರ್ಥಿಗಳಿಗೆ ಆಗಸ್ಟ್ 6ರಿಂದ ವಸತಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಐಟಿಐ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆಯನ್ನೂ ಒದಗಿಸಲಾಗುತ್ತದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ನೋಂದಣಿ ಕಡ್ಡಾಯವಾಗಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ, ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಹಾಯಕ ಪ್ರಾಧ್ಯಾಪಕ ಶ್ರೀನಿವಾಸ್ ಸಿ.ಎಸ್. ಹಾಗೂ ಆಳ್ವಾಸ್ ಅಂಬಾಸಿಡರ್ ಈಶ್ವರ್ ಮಲ್ಪೆ ಉಪಸ್ಥಿತರಿದ್ದರು.

