ಆಗಸ್ಟ್ 7-8ರಂದು ಆಳ್ವಾಸ್ ಪ್ರಗತಿ ಉದ್ಯೋಗ ಮೇಳ

0
5

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ ದೇಶದ ಅತಿದೊಡ್ಡ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ-2026’ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ. ಈ ಬಾರಿಯ ಮೇಳದಲ್ಲಿ 24,298ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದ್ದು, 350ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಅಭ್ಯರ್ಥಿಗಳು ಹಾಗೂ ಉದ್ಯೋಗದಾತರಿಗೆ ಮೇಳವು ಸಂಪೂರ್ಣ ಉಚಿತವಾಗಿದ್ದು, ಐಟಿ, ಉತ್ಪಾದನೆ, ಬ್ಯಾಂಕಿಂಗ್, ಆರೋಗ್ಯ, ಶಿಕ್ಷಣ, ಮಾಧ್ಯಮ, ಆತಿಥ್ಯ, ಎಲೆಕ್ಟ್ರಾನಿಕ್ಸ್, ಔಷಧ, ದೂರಸಂಪರ್ಕ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖ ಕಂಪೆನಿಗಳು ನೇಮಕಾತಿ ನಡೆಸಲಿವೆ ಎಂದು ತಿಳಿಸಿದರು.

ಉದ್ಯೋಗಾಕಾಂಕ್ಷಿಗಳಿಗೆ ಸಂದರ್ಶನದ ಸಿದ್ಧತೆ ಕುರಿತು ಮಾರ್ಗದರ್ಶನ ನೀಡುವ ಉಚಿತ ಓರಿಯೆಂಟೇಶನ್ ಕಾರ್ಯಕ್ರಮಗಳನ್ನು ಪುತ್ತೂರು, ಬಂಟ್ವಾಳ, ಕುಂದಾಪುರ, ಸುಬ್ರಹ್ಮಣ್ಯ, ಮೂಡುಬಿದಿರೆ, ಮಂಗಳೂರು, ಕಾಪು ಹಾಗೂ ಉಪ್ಪಳ ಸೇರಿದಂತೆ ವಿವಿಧೆಡೆ ಆಯೋಜಿಸಲಾಗಿದೆ. 2026ರ ಶೈಕ್ಷಣಿಕ ವರ್ಷದಲ್ಲಿ ಪದವಿ ಪೂರ್ಣಗೊಳಿಸಿದವರು ಹಾಗೂ ಹಿಂದಿನ ವರ್ಷಗಳಲ್ಲಿ ವಿದ್ಯಾಭ್ಯಾಸ ಮುಗಿಸಿರುವ ಅಭ್ಯರ್ಥಿಗಳೂ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.

ಈ ಬಾರಿ ಮೇಳದಲ್ಲಿ ಎಐ ಆಧಾರಿತ ಚಾಟ್‌ಬಾಟ್ ವ್ಯವಸ್ಥೆಯನ್ನು ಪರಿಚಯಿಸಲಾಗಿದ್ದು, ಅಭ್ಯರ್ಥಿಗಳು ತಮ್ಮ ಬಯೋಡೇಟಾ ಅಪ್‌ಲೋಡ್ ಮಾಡಿದ ತಕ್ಷಣ ಅವರ ವಿದ್ಯಾರ್ಹತೆಗೆ ತಕ್ಕ ಕಂಪೆನಿಗಳು ಮತ್ತು ಉದ್ಯೋಗಾವಕಾಶಗಳನ್ನು ಗುರುತಿಸಿ ಶಿಫಾರಸು ಮಾಡಲಿದೆ.

ಉತ್ಪಾದನೆ, ಐಟಿ, ಬ್ಯಾಂಕಿಂಗ್, ಆರೋಗ್ಯ, ನಿರ್ಮಾಣ, ಚಿಲ್ಲರೆ ವ್ಯಾಪಾರ, ಶಿಕ್ಷಣ, ಎಲೆಕ್ಟ್ರಾನಿಕ್ಸ್, ಆತಿಥ್ಯ, ಮಾಧ್ಯಮ, ಔಷಧ ಹಾಗೂ ದೂರಸಂಪರ್ಕ ಸೇರಿದಂತೆ ಹಲವು ವಲಯಗಳಲ್ಲಿ ಸಾವಿರಾರು ಉದ್ಯೋಗಾವಕಾಶಗಳು ಲಭ್ಯವಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ನೇಮಕಾತಿ ಪ್ರಕ್ರಿಯೆಯನ್ನು ಮತ್ತಷ್ಟು ಸುಗಮ ಮತ್ತು ಪಾರದರ್ಶಕಗೊಳಿಸುವ ಉದ್ದೇಶದಿಂದ ಆನ್‌ಲೈನ್ ನೋಂದಣಿ ಕಡ್ಡಾಯ ಮಾಡಲಾಗಿದೆ. ಅಭ್ಯರ್ಥಿಗಳು ಆಳ್ವಾಸ್ ಪ್ರಗತಿ ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಂಡು ತಮ್ಮ ವಿದ್ಯಾರ್ಹತೆಗೆ ಅನುಗುಣವಾದ ಉದ್ಯೋಗಾವಕಾಶಗಳ ಮಾಹಿತಿಯನ್ನು ಪಡೆಯಬಹುದು