ಚಿಕ್ಕೋಡಿ: ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಎಂಟು ತಿಂಗಳ ಗರ್ಭಿಣಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಸಂಭವಿಸಿದೆ.
ಸುವರ್ಣ ಮಠಪತಿ (37) ಕೊಲೆಯಾದ ಗರ್ಭಿಣಿ. ಈಕೆಯ ಪತಿ ಗ್ರಾಮ ದೇವತೆಯ ಅರ್ಚಕರಾಗಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮಹಿಳೆಯ ಪತಿ ಮಧ್ಯಾಹ್ನ ಹಸುಗಳಿಗೆ ಮೇವು ತರಲು ತೋಟಕ್ಕೆ ಹೋಗಿದ್ದರು. ಅಲ್ಲದೆ, ಮಕ್ಕಳು ಕೂಡ ಶಾಲೆಗೆ ಹೋಗಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಈ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತೋಟದಿಂದ ಮೇವು ತಂದ ಪತಿಯು ತನ್ನ ಪತ್ನಿಯನ್ನು ಕರೆದರೂ ಹೊರಗೆ ಬರದಿರುವುದರಿಂದ ಮನೆಗೆ ಬಂದಾಗ ಗರ್ಭಿಣಿ ಪತ್ನಿ ರಕ್ತದ ಮಡಿಲಿನಲ್ಲಿ ಬಿದ್ದು ನರಳಾಡುತ್ತಿರುವುದು ಕಂಡುಬಂದಿದೆ.
ತಕ್ಷಣವೇ, ಪಕ್ಕದ ಹಾರೂಗೇರಿ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡ ಮಹಿಳೆ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಥಣಿ ಪೊಲೀಸರು ಹಾಗೂ ಬೆಳಗಾವಿ ಹೆಚ್ಚುವರಿ ಎಸ್ಪಿ ಶೃತಿ ಎಸ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.