ಆಲಾಡಿ ಸರ್ಕಾರಿ ಶಾಲೆಯಲ್ಲಿ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಸಂಭ್ರಮ

0
6

ಸಜೀಪ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಆಲಾಡಿ ಸಜೀಪ ಮುನ್ನೂರು ಇಲ್ಲಿ ಶನಿವಾರ ಶಾಲಾ ವಾರ್ಷಿಕೋತ್ಸವ, ಮಕ್ಕಳ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆಗೈದ ಹಾಗೂ ಕ್ರೀಡಾಕೂಟಗಳಲ್ಲಿ ಪ್ರತಿಭೆ ಮೆರೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಮನರಂಜನಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು.

ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್ ಕೊಪ್ಪಳ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರು, ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನವನ್ನು ಅವರ ಇಚ್ಛೆಯಂತೆ ಮಕ್ಕಳ ದಿನಾಚರಣೆಯಾಗಿ ದೇಶಾದ್ಯಂತ ಆಚರಿಸಲಾಗುತ್ತಿದೆ. ನೆಹರು ಅವರು ಪಂಚಶೀಲ ತತ್ವಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರಿಗೆ ನಿಜವಾದ ಗೌರವ ಸಲ್ಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಹಮೀದ್, ಆದಮ್, ಗೀತಾ, ಆಲಾಡಿ ಎಜುಕೇಶನ್ ಟ್ರಸ್ಟ್‌ನ ಅಬ್ದುಲ್ ಕರೀಂ, ಯೂಸುಫ್, ಮಂಜಲ್‌ಪಾದೆ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ರೋಹಿಣಿ ಸ್ವಾಗತಿಸಿದರು. ಶಿಕ್ಷಕಿ ಎ. ಪದ್ಮಾವತಿ ಕಾರ್ಯಕ್ರಮ ನಿರೂಪಿಸಿದರು. ಬಹುಮಾನ ವಿಜೇತರ ಪಟ್ಟಿಯನ್ನು ಶಿಕ್ಷಕಿಯರಾದ ಮಾನಸ ಮತ್ತು ಸುರೇಖಾ ವಾಚಿಸಿದರು. ಶಾಲೆಯ ಶೈಕ್ಷಣಿಕ ವರದಿಯನ್ನು ವಿದ್ಯಾ ಮಂಡಿಸಿದರು.