ಬನ್ನಡ್ಕದಲ್ಲಿ ಇನ್ನೊಂದು ಅಪಘಾತ – ಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ ..!

0
17

ಮೂಡುಬಿದಿರೆ: ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ಪ್ರದೇಶದಲ್ಲಿ ಕಲ್ಲು ತುಂಬಿಸಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಘಟನೆ ನಡೆದಿದೆ.

ಅಪಘಾತದ ತೀವ್ರತೆಗೆ ಲಾರಿಯಲ್ಲಿದ್ದ ಕಲ್ಲುಗಳು ರಸ್ತೆಯುದ್ದಕ್ಕೂ ಹರಡಿಕೊಂಡಿದ್ದು, ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಕಳೆದ ಕೆಲವು ದಿನಗಳಿಂದ ಇದೇ ಭಾಗದಲ್ಲಿ ಸರಣಿ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಬನ್ನಡ್ಕ ಪ್ರದೇಶ ಅಪಘಾತಗಳ ತಾಣವಾಗಿ ಮಾರ್ಪಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ದೋಷಗಳು, ಅಪಾಯಕಾರಿ ತಿರುವುಗಳು ಹಾಗೂ ಸಮರ್ಪಕ ಸುರಕ್ಷತಾ ಕ್ರಮಗಳ ಕೊರತೆಯೇ ಅಪಘಾತಗಳಿಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಹಿಂದೆ ಕೂಡ ಸ್ಥಳೀಯರು ಹಾಗೂ ವಾಹನ ಸವಾರರು ರಸ್ತೆ ಅಪಘಾತಗಳ ಬಗ್ಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನಕ್ಕೆ ತಂದು ರಸ್ತೆ ದುರಸ್ತಿ ಹಾಗೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಆದರೂ ಯಾವುದೇ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳದ ಹಿನ್ನೆಲೆ ಮತ್ತೆ ಅಪಘಾತ ಸಂಭವಿಸಿರುವುದು ಸಾರ್ವಜನಿಕರ ಆತಂಕ ಹೆಚ್ಚಿಸಿದೆ.

ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ರಸ್ತೆ ದೋಷಗಳನ್ನು ಸರಿಪಡಿಸಿ, ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ

LEAVE A REPLY

Please enter your comment!
Please enter your name here