ಪೋಕ್ಸೋ ಪ್ರಕರಣದ ಆರೋಪಿಗೆ ನಿರೀಕ್ಷಣಾ ಜಾಮೀನು

0
23

ಪುತ್ತೂರು : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಅದ್ದು ಪಡೀಲ್ ಯಾನೆ ಅದ್ರಾಮ್ ಅವರಿಗೆ ಪುತ್ತೂರು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿದೆ.

ಆ.23ರಂದು ಬಪ್ಪಳಿಗೆಯಲ್ಲಿ ನಡೆದ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಆರೋಪಿ ತನ್ನ ಮಗಳು ಹಾಗೂ ಸಂತ್ರಸ್ತೆಯನ್ನು ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಕಾರ್ಯಕ್ರಮ ಮುಗಿದ ಬಳಿಕ ರಾತ್ರಿ ತನ್ನ ಮಗಳನ್ನು ಮನೆಗೆ ಬಿಟ್ಟು, ಸಂತ್ರಸ್ತೆಯನ್ನು ಮನೆಗೆ ಕರೆದೊಯ್ಯುವ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಆ.24ರಂದು ಸಂತ್ರಸ್ತೆಯ ತಾಯಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದ ಎನ್ನಲಾಗಿದ್ದು, ಬಳಿಕ ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಪುತ್ತೂರು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ನ್ಯಾಯಾಲಯದ ಆದೇಶದ ಷರತ್ತುಗಳು ಹಾಗೂ ತನಿಖೆಯ ಮುಂದಿನ ಕ್ರಮಗಳ ಕುರಿತು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲಿದೆ.