ಡಿಪ್ಲೊಮಾ ಕೃಷಿ ಕೋರ್ಸ್‌ಗೆ ಅರ್ಜಿ ಆಹ್ವಾನ : ಬ್ರಹ್ಮಾವರ ಕೃಷಿ ಮಹಾವಿದ್ಯಾಲಯದಲ್ಲಿ ಪ್ರವೇಶಾತಿಗೆ ಅವಕಾಶ

0
6

ಉಡುಪಿ : 2026-27ನೇ ಶೈಕ್ಷಣಿಕ ಸಾಲಿನ ಡಿಪ್ಲೊಮಾ ಕೃಷಿ ಕೋರ್ಸ್‌ಗೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿರುವ ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು 2026ರ ಮೇ 12ರಿಂದ ಜೂನ್ 12ರವರೆಗೆ www.uahs.edu.in ವೆಬ್‌ಸೈಟ್‌ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 12 ಆಗಿರುತ್ತದೆ.

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನಿಷ್ಠ ಶೇ.45 ಅಂಕಗಳೊಂದಿಗೆ (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ಶೇ.40) ಉತ್ತೀರ್ಣರಾಗಿರುವ ಹಾಗೂ 19 ವರ್ಷ ವಯಸ್ಸು ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ರೈತರು ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50 ಮೀಸಲಾತಿ ಕಲ್ಪಿಸಲಾಗಿದೆ.

ಎರಡು ವರ್ಷಗಳ ಈ ಡಿಪ್ಲೊಮಾ ಕೋರ್ಸ್‌ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುಗಾರಿಕೆ, ರೇಷ್ಮೆ ಕೃಷಿ, ಜೇನು ಕೃಷಿ ಸೇರಿದಂತೆ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ತರಬೇತಿ ನೀಡಲಾಗುತ್ತದೆ. ಅಲ್ಲದೆ ಪ್ರಾಯೋಗಿಕ ಹಾಗೂ ಅನುಭವಾಧಾರಿತ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ ಅಥವಾ ಪ್ರಾಂಶುಪಾಲರು, ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here