ಉಡುಪಿ: ಸಾಮಾಜಿಕ ನ್ಯಾಯದ ಹರಿಕಾರ ದಿ. ಡಿ. ದೇವರಾಜ ಅರಸು ಆಡಳಿತದ ಅವಧಿಯಲ್ಲಿ ಸಮಸಮಾಜ ನಿಮಾರ್ಣದ ರೂವಾರಿಯಾಗಿ, ಹಿಂದುಳಿದ ವರ್ಗದವರ ಹಾಗೂ ದೀನ ದಲಿತರ ಏಳಿಗೆಗೆ ಧ್ವನಿಯಾಗಿದ್ದರು. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಯೊಂದಿಗೆ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು.
ಮಿಷನ್ ಕಂಪೌಂಡ್ನ ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಡೆದ ಡಿ. ದೇವರಾಜ ಅರಸು 111ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ಕಂಡ ಅಪರೂಪದ ಮುತ್ಸದ್ದಿ ರಾಜಕಾರಣಿ ಅರಸು. ದಮನಿತರ ಅಭಿವೃದ್ಧಿಗೆ ಶ್ರಮಿಸಿದ್ದ ಅವರು ರಾಜ್ಯದಲ್ಲಿ ಒಂದಿಂಚು ನೆತ್ತರು ಹರಿಸದೇ ಉಳುವವನನ್ನೇ ಭೂಮಿಯ ಒಡೆಯನ್ನಾಗಿ ಮಾಡಿದ್ದರು. ಅರಸು ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿರುವ ಅವರ ಆದರ್ಶಗಳನ್ನು ಪಾಲಿಸಬೇಕು ಎಂದರು.
ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಯಾವುದೇ ವ್ಯಕ್ತಿ ಜನಪರ ಕೆಲಸಗಳನ್ನು ಮಾಡಿದಾಗ ಎಂದಿಗೂ ಜನಮಾನಸದಲ್ಲಿ ಅಚ್ಚಳಿಯದೇ ಜೀವಂತ ಉಳಿಯಲಿದ್ದಾರೆ ಎನ್ನುವುದಕ್ಕೆ ಡಿ. ದೇವರಾಜ ಅರಸು ರವರು ಜಾರಿಗೆ ತಂದ ಕಾರ್ಯಕ್ರಮಗಳೇ ಸೂಕ್ತ ನಿದರ್ಶನ ಎಂದು ಆಶಿಸಿದರು. ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿದರು. ಉಡುಪಿ ತಾಲೂಕು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನಾಗರಾಜ್ ಅವರು ಡಿ. ದೇವರಾಜ ಅರಸು ರವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ಉಪನ್ಯಾಸ ನೀಡಿದರು. ಜಿಪಂ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ 2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇಲಾಖಾ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಂದ ಸಾಂಸತಿಕ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎ.ಎಸ್.ಪಿ ಸುಧಾಕರ್ ನಾಯಕ್, ನಗರಾಭೀವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ, ಐ.ಟಿ.ಡಿ.ಪಿ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ನಾರಾಯಣ ಸ್ವಾಮಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್. ಲಮಾಣಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ನಿಲಯದ ವಿದ್ಯಾರ್ಥಿನಿ ಚೈತ್ರಾ ಕೆ.ಸಿ ಹಾಗೂ ಗಾನವಿ ನಿರೂಪಿಸಿ, ತಾಲೂಕು ಕಲ್ಯಾಣ ಅಧಿಕಾರಿ ಶ್ರೀಕಾಂತ್ ವಂದಿಸಿದರು.

