ಪುತ್ತೂರು : ನ್ಯಾಯಾಲಯದ ಕಲಾಪ ನಡೆಯುತ್ತಿದ್ದ ವೇಳೆ ಏಕಾಏಕಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಪುತ್ತೂರು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯ ಸೋಮವಾರ 2 ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.
ಶಿಕ್ಷೆಗೆ ಗುರಿಯಾದ ಆರೋಪಿಯನ್ನು ಪುತ್ತೂರು ಸಿರಿಬಾಗಿಲು ನಿವಾಸಿ ಜಯೇಶ್ ಯಾನೆ ಜಯೇಶ್ ಕಾಂತ್ ಎಸ್. ಯಾನೆ ಶಾಕಿರ್ ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ ಆರೋಪಿಯನ್ನು 2016ರ ಏಪ್ರಿಲ್ 5ರಂದು ಮಂಗಳೂರು ಜೈಲಿನಿಂದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಕರೆತರಲಾಗಿತ್ತು. ಈ ವೇಳೆ ನ್ಯಾಯಾಲಯದಲ್ಲಿ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲೇ ಆರೋಪಿ ಪರಾರಿಯಾಗಲು ಯತ್ನಿಸಿದ್ದನು.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಖಾದರ್ ಅವರು ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಪ್ರಕೃತಿ ಕಲ್ಯಾಣಪುರ ಅವರು ಆರೋಪಿಗೆ 2 ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದರು.
ಸರ್ಕಾರದ ಪರ ಕಾನೂನು ಅಭಿಯೋಜಕ ಮನೋಜ್ ಕುಮಾರ್ ಅವರು ವಾದ ಮಂಡಿಸಿದ್ದರು.

