ಎಂಡಿಎಂಎ ಮಾರಾಟಕ್ಕೆ ಯತ್ನ : ಪೊಲೀಸ್ ದಾಳಿಯಲ್ಲಿ ಓರ್ವ ಬಂಧನ

0
98

ಮಂಗಳೂರು: ನಗರದ ಬೋಳಾರದ ಮುಳಿಹಿತ್ತು ಪ್ರದೇಶದಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪಾಂಡೇಶ್ವರ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಧನುಷ್ (29) ಎಂದು ಗುರುತಿಸಲಾಗಿದ್ದು, ಆತ ಉಳ್ಳಾಲ ತಾಲೂಕಿನ ಕುಂಪಲ ಸುರಕ್ಷಾ ನಗರ ನಿವಾಸಿಯಾಗಿದ್ದಾನೆ.

ಖಚಿತ ಮಾಹಿತಿಯ ಮೇರೆಗೆ ಪಾಂಡೇಶ್ವರ ಠಾಣೆ ಪೊಲೀಸರು ದಾಳಿ ನಡೆಸಿದ ವೇಳೆ ಆರೋಪಿಯ ಬಳಿಯಿಂದ 3.32 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತ ಔಷಧಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟ ತಡೆಗಟ್ಟಲು ಪೊಲೀಸ್ ಇಲಾಖೆ ನಿರಂತರವಾಗಿ ವಿಶೇಷ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದು, ಇಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here