ರೈಲಿನಲ್ಲಿ ಅಜ್ಜನ ಪಕ್ಕ ಮಲಗಿದ್ದ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಯತ್ನ; ಆರೋಪಿ ಬಂಧನ

0
26

ಕೊಲ್ಲಂ : ಪಲರುವಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ರೈಲ್ವೇ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ತಮಿಳುನಾಡಿನ ತೆಂಕಾಶಿಯಿಂದ ಕೇರಳಕ್ಕೆ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಬಾಲಕಿ ತನ್ನ ಅಜ್ಜನೊಂದಿಗೆ ಜನರಲ್ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದಳು. ಬೋಗಿಯಲ್ಲಿ ಸೀಟು ಸಿಗದ ಕಾರಣ ರಾತ್ರಿ ವೇಳೆ ಇಬ್ಬರೂ ನೆಲದ ಮೇಲೆಯೇ ಮಲಗಿದ್ದರು. ಇದೇ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಆರೋಪಿ ಸಾನಿಶ್ ಬಾಲಕಿಯ ಬಳಿ ತೆರಳಿ ಕಿರುಕುಳ ನೀಡಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

ಬೋಗಿಯಲ್ಲಿ ಇದ್ದ ಮಹಿಳೆಯೊಬ್ಬರಿಗೆ ಆರೋಪಿಯ ವರ್ತನೆ ಅನುಮಾನಾಸ್ಪದವಾಗಿ ಕಂಡಿದ್ದು, ಅವರು ಮೊಬೈಲ್‌ನಲ್ಲಿ ವಿಡಿಯೋ ದಾಖಲಿಸಿ ತಕ್ಷಣ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ಸಮಯಪ್ರಜ್ಞೆಯಿಂದ ಘಟನೆ ಬಹಿರಂಗವಾಗಿದ್ದು, ಆರೋಪಿ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ರೈಲು ಸೆಂಗೊಟೆ ನಿಲ್ದಾಣ ತಲುಪುತ್ತಿದ್ದಂತೆ ಆರೋಪಿ ಇಳಿದು ಪರಾರಿಯಾಗಲು ಯತ್ನಿಸಿದ್ದರೂ, ರೈಲ್ವೇ ಪೊಲೀಸರು ಅವನನ್ನು ಬಂಧಿಸಿದ್ದಾರೆ. ಬಂಧಿತ ಸಾನಿಶ್ ಕೊಲ್ಲಂ ಮೂಲದವನಾಗಿದ್ದು, ಪೌಲ್ಟ್ರಿ ಫಾರ್ಮ್‌ನಲ್ಲಿ ಕೆಲಸ ಮಾಡುತ್ತಿದ್ದನೆಂದು ತಿಳಿದುಬಂದಿದೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ರೈಲುಗಳಲ್ಲಿ ಹೆಚ್ಚುತ್ತಿರುವ ಮಹಿಳೆ ಮತ್ತು ಮಕ್ಕಳ ಮೇಲಿನ ಕಿರುಕುಳ ಪ್ರಕರಣಗಳನ್ನು ತಡೆಗಟ್ಟಲು ಸಿಸಿಟಿವಿ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here