
ಕಾಪು : ಕಾಪು ಫ್ಲೈಓವರ್ ಸಮೀಪ ಶನಿವಾರ ನಡೆದ ಆಟೋ ರಿಕ್ಷಾ ಹಾಗೂ ಟೆಂಪೋ ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೂವರೆ ವರ್ಷದ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ.
ಉಚ್ಚಿಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಗೆ, ರಸ್ತೆಬದಿಯ ಬ್ಯಾನರ್ ತೆರವುಗೊಳಿಸುವ ಕಾರ್ಯಕ್ಕೆ ಬಳಸಲಾಗುತ್ತಿದ್ದ ಕಾಪು ಪುರಸಭೆಯ ಟೆಂಪೋ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಆಟೋದಲ್ಲಿದ್ದ ಉಚ್ಚಿಲ ನಿವಾಸಿ ಸಂಧ್ಯಾ ಹಾಗೂ ಅವರ ಮಕ್ಕಳಾದ ಗಾಯನ್ ಮತ್ತು ಸುವಿತ್ ಗಾಯಗೊಂಡಿದ್ದರು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೂವರೆ ವರ್ಷದ ಸುವಿತ್‌ನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
