Friday, March 21, 2025
Homeಬೆಂಗಳೂರುಶಾಲೆಗಳಲ್ಲಿ ಚಿಕ್ಕಿ ವಿತರಣೆ ಬಂದ್

ಶಾಲೆಗಳಲ್ಲಿ ಚಿಕ್ಕಿ ವಿತರಣೆ ಬಂದ್

ಕೊಬ್ಬಿನಂಶ ಹೆಚ್ಚು ಇದೆ ಎಂಬ ಕಾರಣಕ್ಕೆ ವಿತರಣೆ ಸ್ಥಗಿತಗೊಳಿಸಲು ಆದೇಶ

ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

1ರಿಂದ 10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ರೂಪದಲ್ಲಿ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಅಪರ್ಯಾಪ್ತ ಕೊಬ್ಬಿನಾಂಶ (ಅನ್‌ಸ್ಯಾಚುರೇಟೆಡ್ ಫ್ಯಾಟ್) ಹೆಚ್ಚಿಗೆ ಇದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದೆ ಇದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಇರುವುದರಿಂದ ವಿತರಣೆ ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಚಿಕ್ಕಿ ವಿತರಣೆ ಸ್ಥಗಿತಗೊಳಿಸಿ ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸುವಂತೆ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ಹಾಗೂ ಧಾರವಾಡ ಅಪರ ಆಯುಕ್ತರು ಕೋರಿದ್ದರು. ಇದೇ ರೀತಿಯ ಆಗ್ರಹ ಇನ್ನೂ ಕೆಲ ಜಿಲ್ಲೆಗಳಿಂದಲೂ ವ್ಯಕ್ತವಾಗಿತ್ತು ಈ ಹಿನ್ನೆಲೆಯಲ್ಲಿ ಸರ್ಕಾರ ಈ ಆದೇಶ ಹೊರಡಿಸಿದೆ.
ರಾಜ್ಯದ ಅನುದಾನಿತ ಮತ್ತು ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆಗೆ ವಾರದ ಆರು ದಿನ ಮೊಟ್ಟೆ ವಿತರಿಸಲಾಗುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಚಿಕ್ಕಿ ಅಥವಾ ಬಾಳೆಹಣ್ಣು ನೀಡಲಾಗುತ್ತಿತ್ತು.

ಬಹುತೇಕ ಶಾಲೆಗಳಲ್ಲಿ ಚಿಕ್ಕಿಯ ಗಾತ್ರ ಒಂದೇ ತೆರನಾಗಿ ಇಲ್ಲದಿರುವುದು, ಅವಧಿ ಮೀರಿದ ಸಂಗ್ರಹ ಮತ್ತಿತರ ಕಾರಣಗಳಿಂದಲೂ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾಗಿ, ಚಿಕ್ಕಿ ವಿತರಣೆ ಮಾಡಬಾರದು ಎಂದು ಇಲಾಖೆ ಸೂಚಿಸಿದೆ. ಈ ಸಂಬಂಧ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು ಇಲಾಖಾ ಆಯುಕ್ತರಿಗೆ ನಿರ್ದೇಶನ ನೀಡಿದೆ.

RELATED ARTICLES
- Advertisment -
Google search engine

Most Popular