ಬಂಟ್ವಾಳ : ಬಿಜೆಪಿ ಎಸ್‌ಸಿ ಮೋರ್ಚಾ ಪದಾಧಿಕಾರಿಗಳ ಸಭೆ; ಸಂಘಟನೆ ಬಲವರ್ಧನೆಗೆ ಕರೆ

0
9

ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಎಸ್‌ಸಿ ಮೋರ್ಚಾದ ಪದಾಧಿಕಾರಿಗಳ ಸಭೆಯು ಬಿ.ಸಿ.ರೋಡಿನ ಬಿಜೆಪಿ ಪಕ್ಷದ ಕಚೇರಿಯಲ್ಲಿ ಎಸ್‌ಸಿ ಮೋರ್ಚಾ ಅಧ್ಯಕ್ಷ ರಮೇಶ್ ಕುದ್ರೆಬೆಟ್ಟು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ರಮೇಶ್ ಕುದ್ರೆಬೆಟ್ಟು, ಪರಿಶಿಷ್ಟ ಜಾತಿ ಸಮಾಜದವರು ವಿರೋಧ ಪಕ್ಷಗಳ ಅಪಪ್ರಚಾರಗಳಿಗೆ ಕಿವಿಗೊಡದೆ ಪಕ್ಷದೊಂದಿಗೆ ಗುರುತಿಸಿಕೊಂಡು ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಬೇಕು. ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಅರ್ಹ ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಕೆಲಸ ಮಾಡಬೇಕು. ಕೀಳರಿಮೆಯನ್ನು ಬಿಟ್ಟು ಸಮಾಜದ ಮುಖ್ಯವಾಹಿನಿಗೆ ಬರಲು ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು.

ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್ ಮಾತನಾಡಿ, ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿದ್ದು, ಮೋರ್ಚಾದ ಕಾರ್ಯಕರ್ತರು ತಮ್ಮ ವ್ಯಾಪ್ತಿಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಈ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು ಮಾತನಾಡಿ, ತಮ್ಮ ಜಾತಿಯ ಬಗ್ಗೆ ಪ್ರತಿಯೊಬ್ಬರಿಗೂ ಗೌರವ ಇರಬೇಕು. ಪರಿಶಿಷ್ಟ ಜಾತಿಯಲ್ಲಿ ಹುಟ್ಟಿರುವುದು ಹೆಮ್ಮೆಯ ವಿಷಯವಾಗಿದ್ದು, ಪಕ್ಷದ ಕೆಲಸಗಳನ್ನು ನಿಷ್ಠೆಯಿಂದ ನಿರ್ವಹಿಸಬೇಕು ಎಂದು ಹೇಳಿದರು.

ಮಂಡಲ ಕಾರ್ಯದರ್ಶಿ ಹಾಗೂ ಎಸ್‌ಸಿ ಮೋರ್ಚಾ ಪ್ರಭಾರಿ ಹಿರಣ್ಮಯಿ ಕಲ್ಲಡ್ಕ ಮಾತನಾಡಿ, ತಮಗೆ ನೀಡಲಾದ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ಬಂಟ್ವಾಳದಲ್ಲಿ ಎಸ್‌ಸಿ ಮೋರ್ಚಾವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಕರೆ ನೀಡಿದರು.

ವೇದಿಕೆಯಲ್ಲಿ ಮಂಡಲ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ಎಸ್‌ಸಿ ಮೋರ್ಚಾ ಅಧ್ಯಕ್ಷ ರಮೇಶ್ ಕುದ್ರೆಬೆಟ್ಟು, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಮಂಡಲ ಕಾರ್ಯದರ್ಶಿ ಹಿರಣ್ಮಯಿ ಕಲ್ಲಡ್ಕ ಹಾಗೂ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕಾರಗುಡ್ಡೆ ಉಪಸ್ಥಿತರಿದ್ದರು.

ಸಭೆಯಲ್ಲಿ ಎಸ್‌ಸಿ ಮೋರ್ಚಾದ ಮಂಡಲ ಪದಾಧಿಕಾರಿಗಳು, ಸದಸ್ಯರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಗೋಪಾಲ ಕಾರಗುಡ್ಡೆ ಸ್ವಾಗತಿಸಿ ವಂದಿಸಿದರು.

ವರದಿ :ಸಾಮಾಜಿಕ ಜಾಲತಾಣ ಪ್ರಕೋಷ್ಠ ಬಿಜೆಪಿ ಬಂಟ್ವಾಳ

LEAVE A REPLY

Please enter your comment!
Please enter your name here