ಬಸವರಾಜ ಭಾಗೇವಾಡಿ ಮಠ ಅವರಿಗೆ ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ

0
8

ಅ.18ರಂದು ಕಾಸರಗೋಡಿನಲ್ಲಿ ನಡೆಯುವ ಕವಿ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ

ಕಾಸರಗೋಡು : ಜನಪ್ರಿಯ ಕವಿ ಹಾಗೂ ಲೇಖಕ ಬಸವರಾಜ ಭಾಗೇವಾಡಿ ಮಠ ಅವರಿಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026” ನೀಡಿ ಗೌರವಿಸಲು ನಿರ್ಧರಿಸಲಾಗಿದೆ.

ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಅವರ ಸಾರಥ್ಯದಲ್ಲಿ ಅ.11ರಿಂದ 20ರವರೆಗೆ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ನಡೆಯಲಿರುವ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026”ರ ಅಂಗವಾಗಿ ಅ.18ರಂದು ಬೆಳಿಗ್ಗೆ 11 ಗಂಟೆಗೆ ಕಾಸರಗೋಡು ದಸರಾ ಕವಿ ಸಮ್ಮೇಳನ ನಡೆಯಲಿದೆ. ಇದೇ ಸಂದರ್ಭದಲ್ಲಿ ಬಸವರಾಜ ಭಾಗೇವಾಡಿ ಮಠ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಸಾಹಿತ್ಯ ಸಂಘಟಕ ಬಿ. ಶ್ರೀನಿವಾಸ್ ಬಹಾದ್ದೂರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಕವಿ ಸಮ್ಮೇಳನವನ್ನು ಚುಟುಕು ಬ್ರಹ್ಮ ಹಾಗೂ ಚುಟುಕು ಸಾಹಿತ್ಯ ಪರಿಷತ್ ಸಂಸ್ಥಾಪಕ ಡಾ. ಎಂ.ಜಿ.ಆರ್. ಅರಸ್ ಮೈಸೂರು ಉದ್ಘಾಟಿಸಲಿದ್ದಾರೆ. ಮೈಸೂರಿನ ಖ್ಯಾತ ಕವಿ ಹಾಗೂ ಸಾಹಿತ್ಯ ರತ್ನ ಜಯಪ್ಪ ಹೊನ್ನಾಳಿ (ಜಯ ಕವಿ ಮೈಸೂರು) ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ.

ರಾಷ್ಟ್ರಮಟ್ಟದ ಸುಮಾರು 75 ಮಂದಿ ಕವಿಗಳು ಭಾಗವಹಿಸಲಿರುವ ಕವಿ ಸಮ್ಮೇಳನದಲ್ಲಿ ಒಟ್ಟು 21 ಮಂದಿ ಕವಿಗಳಿಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026” ನೀಡಿ ಗೌರವಿಸಲಾಗುವುದು ಎಂದು ಕಾಸರಗೋಡು ದಸರಾ ಸಂಚಾಲಕ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಮತ್ತು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಪಾಂಗೋಡು ಪ್ರವೀಣ್ ನಾಯಕ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.