ಪ್ರಾಕೃತಿಕ ವಿಕೋಪ ನಿಭಾಯಿಸಲು ಸನ್ನದ್ಧರಾಗಿ : ಜಿಲ್ಲಾಧಿಕಾರಿ

0
5

ಉಡುಪಿ: ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಇಲಾಖೆಗಳು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಮಳೆ ಪೂರ್ವ ಸಿದ್ಧತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚರಂಡಿ ಮತ್ತು ತೋಡುಗಳ ಸ್ವಚ್ಛತೆ, ಮಳೆಯ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಹಾಗೂ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ 24 ಗಂಟೆಗಳ ಕಂಟ್ರೋಲ್ ರೂಂ ತೆರೆಯಬೇಕು. ನೀರಿನ ಗುಣಮಟ್ಟ ಪರೀಕ್ಷೆಯನ್ನು ನಿರಂತರವಾಗಿ ನಡೆಸಿ, ಕಲುಷಿತ ನೀರು ಕಂಡುಬಂದಲ್ಲಿ ತಕ್ಷಣ ಪುನಶ್ಚೇತನ ಕಾರ್ಯ ಕೈಗೊಳ್ಳಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಳೆಗಾಲದ ಸಮಸ್ಯೆಗಳಿಗೆ “ಮಾನ್ಸೂನ್ ಟಾಸ್ಕ್ ಫೋರ್ಸ್” ತಂಡ ರಚಿಸಿ, ತುರ್ತು ಸಂಪರ್ಕ ಸಂಖ್ಯೆಯನ್ನು ಸಾರ್ವಜನಿಕರಿಗೆ ಪ್ರಕಟಿಸಬೇಕು. ಹೆದ್ದಾರಿಗಳ ಮೇಲೆ ಬಿದ್ದ ಮರಗಳನ್ನು ತಕ್ಷಣ ತೆರವುಗೊಳಿಸಲು ಸಿದ್ಧರಾಗಿರಬೇಕು ಎಂದು ಸೂಚಿಸಿದರು.

ಮರವಂತೆ ಬೀಚ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ನಿಲುಗಡೆಯಿಂದ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ, ‘ವಾಹನ ನಿಲುಗಡೆ ನಿಷೇಧ’ ಫಲಕಗಳನ್ನು ಅಳವಡಿಸಿ, ರಸ್ತೆ ಬದಿಯ ಗೂಡಂಗಡಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಹೇಳಿದರು.

ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ ಔಷಧಿ ಹಾಗೂ ಚುಚ್ಚುಮದ್ದುಗಳನ್ನು ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿಟ್ಟುಕೊಳ್ಳಬೇಕು. ಆರೋಗ್ಯ ಇಲಾಖೆಯ ಕಂಟ್ರೋಲ್ ರೂಂಗಳು ದಿನಪೂರ್ತಿ ಕಾರ್ಯನಿರ್ವಹಿಸಬೇಕು ಎಂದರು.

ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ದುರಸ್ತಿ, ಪ್ರವಾಹ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ, ಅಪಾಯಕಾರಿ ಮರಗಳ ತೆರವು, ಸಮುದ್ರ ಕೊರೆತ ತಡೆ ಹಾಗೂ ಸಿಡಿಲು ಸಂದರ್ಭದ ಜಾಗೃತಿ ಕಾರ್ಯಗಳಿಗೆ ಸಂಬಂಧಿಸಿದಂತೆ ಕೂಡ ಅಗತ್ಯ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಸಹಾಯಕ ಕಮೀಷನರ್ ರಶ್ಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here