ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಜೀವಾವಧಿ ಶಿಕ್ಷೆ, 10 ಲಕ್ಷ ರೂ. ದಂಡ ವಿಧಿಸಿ ಕೋರ್ಟ್ ಆದೇಶ

0
43

ಬೆಂಗಳೂರು: ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ   ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.

ಐಪಿಸಿ ಸೆಕ್ಷನ್ 376(2)(k) ಹಾಗೂ 376 (2)(n) ಅಡಿ ತೀರ್ಪು ಪ್ರಕಟಿಸಲಾಗಿದ್ದು, ಜೀವನ ಪರ್ಯಂತ ಜೈಲು ಶಿಕ್ಷೆಯನ್ನು ಪ್ರಜ್ವಲ್ ಅನುಭವಿಸಬೇಕಿದೆ. ಅತ್ಯಾಚಾರದ 2 ಸೆಕ್ಷನ್​​​ಗಳ ಅಡಿ ಒಟ್ಟು 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದರಲ್ಲಿ 7 ಲಕ್ಷ ರೂ. ಸಂತ್ರಸ್ತೆಗೆ ನೀಡಬೇಕು ಎಂದು ಜಡ್ಜ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ಕೇವಲ 4 ತಿಂಗಳ ದಾಖಲೆ ಸಮಯದಲ್ಲೇ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ. ಇದರೊಂದಿಗೆ, ಮೂರು ಅತ್ಯಾಚಾರ ಪ್ರಕರಣ, 1 ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು 4 ಪ್ರಕರಣಗಳ ಪೈಕಿ ಒಂದರಲ್ಲಿ ತೀರ್ಪು ಹೊರಬಿದ್ದಂತಾಗಿದೆ. ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂಬುದು ಸಾಬೀತಾಗಿದೆ. ಪ್ರಜ್ವಲ್ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಕೋರ್ಟ್, ಶಿಕ್ಷೆ ಪ್ರಮಾಣದ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತ್ತು. ಇಂದು ಬೆಳಗ್ಗೆ ನಡೆದ ವಾದ-ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಅಂತಿಮವಾಗಿ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ. ಒಟ್ಟಾರೆಯಾಗಿ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರವೆಸಗಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡಿರುವ ಆರೋಪ ಸಂಬಂಧ ಮೂರು ಪ್ರತ್ಯೇಕ ಪ್ರಕರಣಗಳು ಇನ್ನೂ ವಿಚಾರಣಾ ಹಂತದಲ್ಲಿ ಇವೆ. ಅವುಗಳ ತೀರ್ಪು ಇನ್ನಷ್ಟೇ ಹೊರಬೀಳಬೇಕಿದೆ.

LEAVE A REPLY

Please enter your comment!
Please enter your name here