ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ಅಧಿಸೂಚನೆಯನ್ನು ತಕ್ಷಣವೇ ಹಿಂಪಡೆಯಲು ಬಿಜೆಪಿ ಆಗ್ರಹ

0
4

ಅಕ್ರಮ ವಲಸಿಗರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸಿ, ಮತದಾರರ ಪಟ್ಟಿಗೆ ಸೇರಿಸುವ ಉದ್ದೇಶ ಸರ್ಕಾರ ಹೊಂದಿದ್ದು, ಇದು ಸಂವಿಧಾನ ವಿರೋಧಿ ಹಾಗೂ ರಾಷ್ಟ್ರೀಯ ಭದ್ರತೆಗೆ ಅಪಾಯ ಉಂಟುಮಾಡಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆತಂಕ ವ್ಯಕ್ತಪಡಿಸಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆಯ ಮೂಲಕ ಪಿಆರ್‌ಸಿ ನೀಡುವ ಕ್ರಮವನ್ನು ಸರ್ಕಾರ ಆರಂಭಿಸಿದ್ದು, ಇದನ್ನು ಅಕ್ರಮ ವಲಸಿಗರು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಆರೋಪಿಸಿದರು.
ಗ್ಯಾರಂಟಿ ಯೋಜನೆಗಳ ಲಾಭ ಹಾಗೂ ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ವಲಸಿಗರನ್ನು ಸೇರಿಸಿ ಮತಬ್ಯಾಂಕ್ ರಾಜಕೀಯ ನಡೆಸುವ ಉದ್ದೇಶದಿಂದ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಟೀಕಿಸಿದರು.
ಇತ್ತೀಚೆಗೆ ಸುರತ್ಕಲ್‌ನಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆಯಾಗಿರುವ ಘಟನೆಯನ್ನು ಉಲ್ಲೇಖಿಸಿದ ಅವರು, ಅಕ್ರಮ ವಲಸಿಗರನ್ನು ಗುರುತಿಸಿ ಕ್ರಮ ಕೈಗೊಳ್ಳುವ ಬದಲು ಅವರಿಗೆ ಅನುಕೂಲವಾಗುವ ನೀತಿಗಳನ್ನು ಸರ್ಕಾರ ಜಾರಿಗೊಳಿಸುತ್ತಿದೆ ಎಂದು ದೂರಿದರು.
ದಕ್ಷಿಣ ಕನ್ನಡ ಜಿಲ್ಲೆಯ 1,876 ಮತಗಟ್ಟೆಗಳಲ್ಲಿ, ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ವಾಸ್ತವ್ಯ ದೃಢೀಕರಣ ಪತ್ರಗಳ ವಿತರಣೆಯನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಇಲ್ಲವಾದರೆ ಅಕ್ರಮ ವಲಸಿಗರು ದಾಖಲೆಗಳನ್ನು ಪಡೆದು ಮತದಾರರ ಪಟ್ಟಿಗೆ ಸೇರುವ ಅಪಾಯವಿದೆ ಎಂದು ಎಚ್ಚರಿಸಿದರು.
ಕರ್ನಾಟಕದಲ್ಲಿ ಪಿಆರ್‌ಸಿ ಜಾರಿಯಿಂದ ಉಂಟಾಗುವ ಬಾಧಕಗಳ ಕುರಿತು ಕೇಂದ್ರ ಗೃಹ ಸಚಿವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈಗಾಗಲೇ ಪತ್ರ ಬರೆದು ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಪಿಆರ್‌ಸಿ ಅಧಿಸೂಚನೆಯನ್ನು ಹಿಂಪಡೆಯದಿದ್ದರೆ ಕಾನೂನು ಹೋರಾಟದ ಜೊತೆಗೆ ರಾಜ್ಯಾದ್ಯಂತ ಸಾರ್ವಜನಿಕ ಹೋರಾಟ ನಡೆಸಲಾಗುವುದು ಎಂದು ಸತೀಶ್ ಕುಂಪಲ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಕಿಶೋರ್ ಕುಮಾರ್, ಪಕ್ಷದ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ವಸಂತ ಪೂಜಾರಿ, ಪೂಜಾ ಪೈ ಹಾಗೂ ಜಯಶ್ರೀ ಉಪಸ್ಥಿತರಿದ್ದರು.


ವರದಿ ರಾಯಿ ರಾಜ ಕುಮಾರ್

LEAVE A REPLY

Please enter your comment!
Please enter your name here