ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಕೆ.ಎಸ್. ಈಶ್ವರಪ್ಪ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಬಳಕೆ ಮಾಡುವುದನ್ನು ನಿರ್ಬಂಧಿಸುವಂತೆ ಕೋರಿ ಬಿಜೆಪಿ ಜಿಲ್ಲಾ ಘಟಕ ಕೋರ್ಟ್ ಮೆಟ್ಟಿಲೇರಿದೆ. ಚುನಾವಣೆ ಪ್ರಚಾರ ಸಭೆಗಳಲ್ಲಿ ಪ್ರಧಾನಿ ಮೋದಿಯವರ ಭಾವಚಿತ್ರ ಬಳಸುವುದಕ್ಕೆ ಈಶ್ವರಪ್ಪ ವಿರುದ್ಧ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಬಿಜೆಪಿಯ ಅಧಿಕೃತ ಅಭ್ಯರ್ಥಿಗೆ ಮಾತ್ರ ಪ್ರಧಾನಿಯವರ ಭಾವಚಿತ್ರ ಬಳಸುವ ಅವಕಾಶವಿದೆ. ಬೇರೆಯವರು ಮಾಡಿದರೆ ಅದು ಕಾನೂನು ಉಲ್ಲಂಘನೆಯಾಗುತ್ತದೆ. ಹೀಗಾಗಿ ಈಶ್ವರಪ್ಪ ಪ್ರಧಾನಿ ಮೋದಿಯವರ ಭಾವಚಿತ್ರ ಬಳಸುವುದಕ್ಕೆ ತಡೆಯಾಜ್ಞೆ ನೀಡುವಂತೆ ಬಿಜೆಪಿ ಕೋರಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ದಾವೆ ಹೂಡಿದ್ದಾರೆ. ಬಿಜೆಪಿ ಪರವಾಗಿ ನ್ಯಾಯವಾದಿ ಕೆ. ಬಸಪ್ಪಗೌಡ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಮೋದಿ ಭಾವಚಿತ್ರ ಬಳಕೆ ಬಗ್ಗೆ ಈಶ್ವರಪ್ಪ ಈಗಾಗಲೇ ಕೇವಿಯಟ್ ಸಲ್ಲಿಸಿದ್ದಾರೆ. ನ್ಯಾಯಾಲಯ ಇಂದು ವಿಚಾರಣೆ ಕೈಗೆತ್ತಿಕೊಳ್ಳಲಿದೆ.