ಉಡುಪಿ: ಜಿಲ್ಲೆಯ ಮಣಿಪಾಲದ KMC ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಹಾಗೂ ಪ್ರಧಾನಮಂತ್ರಿ ರಾಹತ್ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ ಎಂದು ಆರೋಪಿಸಿ, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಬಡವರು, ಮಧ್ಯಮ ವರ್ಗದವರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಹಾಗೂ ರಸ್ತೆ ಅಪಘಾತ ಸಂತ್ರಸ್ತರ ಚಿಕಿತ್ಸೆಗೆ ಇರುವ ಪ್ರಧಾನಮಂತ್ರಿ ರಾಹತ್ ಯೋಜನೆ ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ ಎಂದು ಆರೋಪಿಸಲಾಗಿದೆ.

ಜಿಲ್ಲೆಯ ಪ್ರಮುಖ ಖಾಸಗಿ ಆಸ್ಪತ್ರೆಯಾದ KMC ಮಣಿಪಾಲದಲ್ಲಿ ಈ ಯೋಜನೆಗಳ ಸೌಲಭ್ಯ ಪಡೆಯಲು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಈ ಕುರಿತು ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಜಿಲ್ಲಾಧಿಕಾರಿಯನ್ನು ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, “ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯಲು ಜಿಲ್ಲೆಯ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆಯನ್ನು ಏಳು ದಿನಗಳೊಳಗೆ ಬಗೆಹರಿಸಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

