ಉಡುಪಿ: ಜಿಲ್ಲೆಯನ್ನು ರ್ನಿಲಕ್ಷ$್ಯ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ, ಮೇ 16ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ16ರಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಲಾಗುವುದು ಎಂದರು.
ರಾಜ್ಯ ಸರ್ಕಾರ 2023 ರಲ್ಲಿ ಅಧಿಕಾರಕ್ಕೆ ಬಂದ ದಿನದಿಂದ ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಲತಾಯಿ ಧೋರಣೆ ತೋರಿಸುತ್ತ್ತಿದೆ. ನರ್ಮ ಬಸ್ ಯೋಜನೆಯಲ್ಲಿ 40 ಕ್ಕೂ ಹೆಚ್ಚು ಬಸ್ಸುಗಳು ಪ್ರಯಾಣಿಸುತ್ತಿತ್ತು. ಇದೀಗ ಸರ್ಕಾರ ಗ್ಯಾರಂಟಿ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ ಶೇ. 50 ಬಸ್ಗಳನ್ನು ಕಡಿತಗೊಳಿಸಿದೆ. ಉಡುಪಿ ಜಿಲ್ಲಾ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸದೆ ಜಿಲ್ಲೆಯ ಬಡ ರೋಗಿಗಳ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ. ಉಡುಪಿ ಪರ್ಯಾಯಕ್ಕೆ ಅನುದಾನ ನೀಡುವ ಭರವಸೆಯನ್ನು ನೀಡಿ ನಂತರ ಬಿಡಿಗಾಸು ಕೊಡದೆ ಹಿಂದೂ ಸಮಾಜಕ್ಕೆ ಅನ್ಯಾಯ ಮಾಡಿದೆ. ಎರಡು ತಿಂಗಳುಗಳಿಂದ ಭೂಮಾಪಕರು ಮುಷ್ಕರ ನಡೆಸುತ್ತಿದ್ದು, ಜನರಿಗೆ ಅನ್ಯಾಯವಾಗುತ್ತಿದ್ದರೂ ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಟಿಯಲ್ಲಿ ಯುವಮೋರ್ಚಾದ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

