ಉಡುಪಿ,: ಪಡುಅಲೆವೂರಿನ ಮನೆಯಿಂದ ನಾಪತ್ತೆಯಾಗಿದ್ದ ವೃದ್ಧೆಯೊಬ್ಬರ ಮೃತದೇಹವು ಮನೆಯ ಸಮೀಪದ ಖಾಸಗಿ ಜಾಗದಲ್ಲಿರುವ ಬಾವಿಯಲ್ಲಿ ಮಂಗಳವಾರ ಪತ್ತೆಯಾಗಿದೆ.
ವೃದ್ಧೆ ನಾಪತ್ತೆಯಾಗಿರುವ ಬಗ್ಗೆ ಈ ಹಿಂದೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮನೆಯ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ವೃದ್ಧೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಮೃತರನ್ನು ಶಾಂತ ಶೆಟ್ಟಿಗಾರ್ತಿ ಎಂದು ಗುರುತಿಸಲಾಗಿದೆ.
ಅಗ್ನಿಶಾಮಕ ದಳದ ನಾಗೇಶ್ ಅವರ ತಂಡ ಅಗತ್ಯ ಸುರಕ್ಷತಾ ಪರಿಕರಗಳನ್ನು ಬಳಸಿ ಬಾವಿಯ ಆಳದಲ್ಲಿದ್ದ ಮೃತದೇಹವನ್ನು ಮೇಲಕ್ಕೆತ್ತಿತು. ಬಳಿಕ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವೃದ್ಧೆಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಪರೀಕ್ಷಿಸಿದ ವೈದ್ಯರು ವೃದ್ಧೆ ಮೃತಪಟ್ಟಿರುವುದನ್ನು ದೃಢಪಡಿಸಿದರು.

