ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಇಲಾಖೆಯ ವತಿಯಿಂದ ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿ ಅಶೋಕ್ ಮಾಳಭಾಗಿ ಅವರ ಅಧ್ಯಕ್ಷತೆಯಲ್ಲಿ ಸಮಾಜ ಸೇವಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಉಡುಪಿ ಜಿಲ್ಲೆ ಮತ್ತು ಬ್ರಹ್ಮಾವರ ತಾಲೂಕಿನ ವ್ಯಾಪ್ತಿಯಲ್ಲಿ ಹಲವು ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಿ, ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತಿರುವ ಸಮಾಜ ಸೇವಕರಾದ ಸತೀಶ್ ಪೂಜಾರಿ ಕೀಳಂಜೆ ಹಾಗೂ ಪ್ರಸಿದ್ಧ ಆಪತ್ಬಾಂಧವ, ಮುಳುಗು ತಜ್ಞ ಈಶ್ವರ್ ಮಲ್ಪೆ ಇವರನ್ನು ಗೌರವಿಸಲಾಯಿತು.
ಸುಮಾರು 15 ವರ್ಷಗಳಿಂದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸತೀಶ್ ಪೂಜಾರಿ ಅವರು ರಸ್ತೆ ಅಪಘಾತಗಳನ್ನು ತಡೆಗಟ್ಟುವಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದು, ಸಾರ್ವಜನಿಕರ ಆಸ್ತಿ-ಪಾಸ್ತಿಗಳಿಗೆ ತೊಂದರೆ ಉಂಟಾದಾಗ ತಕ್ಷಣ ಸ್ಪಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ವೇಳೆ, ಅಪಘಾತ ಹಾಗೂ ಮುಳುಗು ಘಟನೆಗಳಲ್ಲಿ ರಕ್ಷಣಾ ಕಾರ್ಯದಲ್ಲಿ ಖ್ಯಾತಿ ಪಡೆದ ಈಶ್ವರ್ ಮಲ್ಪೆ ಅವರ ಸೇವೆಯನ್ನು ವಿಶೇಷವಾಗಿ ಮೆಚ್ಚುಗೆ ವ್ಯಕ್ತಪಡಿಸಲಾಯಿತು.
ದಿನಾಂಕ 30-04-2026 ಗುರುವಾರ ಬ್ರಹ್ಮಾವರದ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ನಡೆದ ಈ ಸಮಾರಂಭದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಇವರಿಬ್ಬರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಅಶೋಕ್ ಮಾಳಭಾಗಿ, ಜಯಂತ್, ಸಹಾಯಕ ಉಪನಿರೀಕ್ಷಕರಾದ ಶೇಖರ್ ನಾಯಕ್, ಕೃಷ್ಣಪ್ಪ, ಕರ್ನಾಟಕ ಬಿಲ್ಡರ್ ಸಂಸ್ಥೆಯ ಪ್ರವರ್ತಕರಾದ ಉದ್ಯಮಿ ಚೇತನ್ ಶೆಟ್ಟಿ ಹಾಗೂ ಪೊಲೀಸ್ ಸಿಬ್ಬಂದಿ ವರ್ಗ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.
ಕಾರ್ಯಕ್ರಮವು ಬ್ರಹ್ಮಾವರ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಜಯಂತ್ ಅವರ ಬೀಳ್ಕೊಡುಗೆ ಸಮಾರಂಭದ ಅಂಗವಾಗಿ ನಡೆಯಿತು.

